ನೂತನ ಶಿಕ್ಷಣ ನೀತಿಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಳ: ಅಶ್ವಥ್ ನಾರಾಯಣ್

Public TV
2 Min Read
Ashwath Narayana

ಶಿವಮೊಗ್ಗ: ಶಿಕ್ಷಣ ಕ್ಷೇತ್ರದಲ್ಲಿನ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು.

CN Ashwath Narayan Shivamogga

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2021 ಕುರಿತಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮೂರು ದಶಕಗಳ ಬಳಿಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಶಿಕ್ಷಣದ ಮೂಲಕ ಮಾತ್ರ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಸಾಧ್ಯ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಬಲ ಸ್ಪರ್ಧೆಯಿದ್ದು, ಸ್ಪರ್ಧೆಯಲ್ಲಿ ಜಯಗಳಿಸಿದರೆ ಮಾತ್ರ ಅಸ್ತಿತ್ವ ಕಂಡುಕೊಳ್ಳಬಹುದು. ಇಂತಹ ಸ್ಪರ್ಧೆಯನ್ನು ಎದುರಿಸಲು ಗುಣಮಟ್ಟದ ಶಿಕ್ಷಣ ಅಗತ್ಯವಿದ್ದು, ನೂತನ ಶಿಕ್ಷಣ ನೀತಿ ಇದಕ್ಕೆ ಪೂರಕವಾಗಿದೆ ಎಂದು ಹೇಳಿದರು.

ನೂತನ ಶಿಕ್ಷಣ ನೀತಿಯು ಶಿಕ್ಷಣ ಸಂಸ್ಥೆಗಳಿಗೆ ಜವಾಬ್ದಾರಿಯೊಂದಿಗೆ ಸಂಪೂರ್ಣ ಅಧಿಕಾರವನ್ನು ನೀಡುತ್ತದೆ. ಪ್ರತಿಯೊಂದು ಸಂಸ್ಥೆ ಸ್ವಾಯತ್ತತೆಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಸಂಸ್ಥೆಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಕೇವಲ ಮೂಲಭೂತ ಸೌಕರ್ಯಗಳು ಮಾತ್ರವಲ್ಲದೆ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವುದು, ಅಹವಾಲುಗಳನ್ನು ಸರಿಯಾಗಿ ಆಲಿಸಲು ವೇದಿಕೆಗಳನ್ನು ಕಲ್ಪಿಸಬೇಕಾಗಿದೆ. ಪ್ರತಿಯೊಂದು ಸಂಸ್ಥೆಗಳು ಪಡೆಯುವ ಶುಲ್ಕದ ವಿವರಗಳನ್ನು ಸಹ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಬೇಕಾಗಿದೆ ಎಂದರು.

ಕೊನೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಸಭೀಕರ ಪ್ರಶ್ನೆಗಳಿಗೆ ಉತ್ತರಿಸಿದರು. ಕಳೆದ ಏಳು ವರ್ಷಗಳ ಸತತ ಪರಿಶ್ರಮದ ಬಳಿಕ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಮುಂದಿನ 10 ರಿಂದ 15 ವರ್ಷಗಳ ಅವಧಿಯಲ್ಲಿ ಹೊಸ ಶಿಕ್ಷಣ ನೀತಿಯ ಪರಿಣಾಮಗಳನ್ನು ಗುರುತಿಸಲು ಸಾಧ್ಯವಿದೆ. ಕರ್ನಾಟಕ ಶಿಕ್ಷಣ ನೀತಿಯನ್ನು ಜಾರಿಗೆ ತಂದಿರುವ ಪ್ರಥಮ ರಾಜ್ಯವಾಗಿದ್ದು, ಇದನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

CN Ashwath Narayan Shivamogga 1

ಸಭೆಯಲ್ಲಿ ಎಂಎಲ್ ಸಿ ಆಯನೂರು ಮಂಜುನಾಥ್, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ವೀರಭದ್ರಪ್ಪ, ರಿಜಿಸ್ಟ್ರಾರ್ ಅನುರಾಧ, ಗೋಪಾಲಕೃಷ್ಣ ಜೋಷಿ, ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *