ಹಾಸನ: ಜೆಡಿಎಸ್ ಹಾಗೂ ಕಾಂಗ್ರಸ್ಸಿನ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, ಹಳ್ಳಿ ಮಾತಿನಲ್ಲಿ ಹೇಳೊದಾದರೆ ಗುಂಡ್ರಗೂಳಿ ತರ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.
ಹೊಳೆನರಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ಬಿಜೆಪಿಗೆ ಹೋಗುವುದು ಕೇವಲ ಊಹಾಪೋಹ. ಕೆಲ ಕೈ ಶಾಕಸರು ಬಿಜೆಪಿಗೆ ಹೋಗಲಿದ್ದಾರೆ, ಸರಕಾರ ಪತನವಾಗಲಿದೆ ಎಂಬುದು ಮಾಧ್ಯಮಗಳ ಸೃಷ್ಟಿ ಅಷ್ಟೇ. ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಒಂದೇ ಸಮುದಾಯದವರು. ಅವರ ಭೇಟಿಗೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಹೋಗಬೇಕು ಎನ್ನುವ ಅಭಿಪ್ರಾಯವಿದೆ. ಬಿಜೆಪಿಗೆ ವಿರುದ್ಧವಾಗಿ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂಬುದು ದೇವೇಗೌಡರ ಅಭಿಪ್ರಾಯವಾಗಿದೆ ಎಂದು ಹೇಳಿದರು.
ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಪೂರ್ಣವಾಗಿದೆ. ಸಮನ್ವಯ ಸಮಿತಿ ಪುನರ್ ರಚನೆಯ ಅಗತ್ಯವಿದೆ. ಆದರೆ ಸಮನ್ವಯ ಸಮಿತಿ ಅಧ್ಯಕ್ಷರು ಸದ್ಯ ವಿದೇಶದಲ್ಲಿದ್ದಾರೆ. ಅವರು ರಾಜ್ಯಕ್ಕೆ ಮರಳಿದ ನಂತರ ಈ ಬಗ್ಗೆ ಚರ್ಚೆ ನಡೆಸುತ್ತೇನೆ. ಸಚಿವ ಡಿ.ಕೆ.ಶಿವಕುಮಾರ್ ಪ್ರಕರಣಕ್ಕೂ, ಸಮ್ಮಿಶ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಕೇಂದ್ರ ಸರ್ಕಾರ ಐಟಿ, ಇಡಿ ಹಾಗೂ ಸಿಬಿಐ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ಒತ್ತಡ ಹೇರುತ್ತಿದೆ. ಹೀಗೆ ಮಾಡುವುದು ತಪ್ಪು. ಕೇಂದ್ರ ಸರ್ಕಾರಕ್ಕೆ ಇದನ್ನು ಬಿಟ್ಟು ಮಾಡಲು ಬೇರೆ ಕೆಲಸಗಳು ಬಹಳ ಇವೆ ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಘಟಕ ಶೀಘ್ರವೇ ಪುನರ್ ರಚನೆಯಾಗಲಿದೆ. ಈಗಾಗಲೇ ಈ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದೇವೆ. ಎಲ್ಲಾ ಸಮುದಾಯಕ್ಕೆ ಆಧ್ಯತೆಯನ್ನು ನೀಡಿ, ಶೀಘ್ರವೇ ನೂತನ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಮಾತನಾಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv