ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳ ಯುವ ಮುಖಂಡರುಗಳ ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಸತೀಶ್ ರೆಡ್ಡಿ(28) ಕೊಲೆಯಾದ ವ್ಯಕ್ತಿ. ಸತೀಶ್ ರೆಡ್ಡಿ ಬನ್ನೇರುಘಟ್ಟ ಸಮೀಪದ ಕಲ್ಕೆರೆ ನಿವಾಸಿಗಾಗಿದ್ದು, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು.
Advertisement
Advertisement
ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ತನ್ನ ಪತ್ನಿಯನ್ನು ಇಂದು ಬೆಳಗ್ಗೆ ಬಿಟ್ಟು ಸತೀಶ್ ಅವರು ವಾಪಾಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಎರಡು ಬೈಕ್ ಗಳಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಹುಲುವಳ್ಳಿಯ ಬಳಿಯ ರಸ್ತೆಯಲ್ಲಿ ಸತೀಶ್ ಅವರನ್ನು ಅಡ್ಡಗಟ್ಟಿ ಲಾಂಗು ಮಚ್ಚುಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
Advertisement
ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಹಲ್ಲೆಗೊಳಗಾದ ಸತೀಶ್ ಅವರು ಕೆಲ ದೂರ ಓಡಿ ಖಾಲಿ ಜಾಗದಲ್ಲಿ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸತೀಶ್ ಅವರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಆದ್ರೆ ಸತೀಶ್ ಗಂಭೀರ ಗಾಯಗೊಂಡಿದ್ದರಿಂದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Advertisement
ತಕ್ಷಣವೇ ಸ್ಥಳೀಯರು ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ರವಾನಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದಾರೆ.
ಇನ್ನು ಕೊಲೆಯಾದ ಸತೀಶ್ ರೆಡ್ಡಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿ ವಾಪಸ್ಸಾಗಿದ್ದು, ಈತನನ್ನು ಬನ್ನೇರುಘಟ್ಟ ಪೊಲೀಸ್ ಠಾಣೆಯ ರೌಡಿ ಶೀಟರ್ ಪಟ್ಟಿಗೆ ಸೇರಿಸುವ ತಯಾರಿ ನಡೆಯುತ್ತಿತ್ತು ಎನ್ನಲಾಗಿದೆ. ಅಷ್ಟರಲ್ಲಿ ಸತೀಶ್ ರೆಡ್ಡಿ ಕೊಲೆಯಾಗಿ ಹೋಗಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಪರಿಚಯಸ್ಥರೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.