Connect with us

Dharwad

ಕೊನೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅರೆಸ್ಟ್

Published

on

Share this

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಮುಖಂಡ ಯೋಗೇಶ್ವರ್ ಕೊಲೆ ಪ್ರಕರಣದಲ್ಲಿ ಬೆಳಗ್ಗೆಯಿಂದ ಸತತ 9 ಗಂಟೆಗಳ ಕಾಲ ವಿನಯ್ ಅವರನ್ನು ವಶಕ್ಕೆ ಪಡೆದು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸದ್ಯ ಅವರನ್ನು ಬಂಧಿಸಿ ಕೊರೊನಾ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಬರಾಕೊಟ್ರಿಯಲ್ಲಿರುವ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ 6 ಮಂದಿಯ ತಂಡ ಕುಲಕರ್ಣಿಯನ್ನು ವಶಕ್ಕೆ ಪಡೆದು, ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದಿತ್ತು. ವಿನಯ್ ಕುಲಕರ್ಣಿ ತನ್ನದೇ ವಾಹನದಲ್ಲಿ ಪೊಲೀಸ್ ಠಾಣೆಗೆ ಆಗಮಿಸಿದ್ದರು.

2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

ರಾಜ್ಯ ಸರ್ಕಾರ 2019 ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.

Click to comment

Leave a Reply

Your email address will not be published. Required fields are marked *

Advertisement