ಬೆಂಗಳೂರು: ಕೈ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ಹೈ ಕಮಾಂಡ್ ಸಹ ಆತಂಕಕ್ಕೊಳಗಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕರೆ ಮಾಡಿ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಮಾತನಾಡಿ ಪ್ರಸಕ್ತ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಮೇಶ್ ಜಾರಕಿಹೊಳಿ ಹಾಗೂ ಆನಂದ್ ಸಿಂಗ್ ರಾಜೀನಾಮೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಕೆ.ಸಿ ವೇಣುಗೋಪಾಲ್ ಅವರಿಗೆ ವರದಿ ಸಲ್ಲಿಸುವಂತೆ ತಿಳಿಸಿದೆ. ಶಾಸಕರ ರಾಜೀನಾಮೆಗೆ ಕಾರಣಗಳು, ಇನ್ನೂ ರಾಜೀನಾಮೆ ನೀಡುವ ಶಾಸಕರ ಮಾಹಿತಿ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಾಸಕರ ರಾಜೀನಾಮೆ ಕುರಿತು ವಿವರ ಪಡೆಯಲು ಕರ್ನಾಟಕಕ್ಕೆ ತೆರಳುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೂಚಿಸಿದ್ದು, ಹೈಕಮಾಂಡ್ ಸೂಚನೆ ಬೆನ್ನಲ್ಲೇ ರಾಜ್ಯ ನಾಯಕರೊಂದಿಗೆ ಕೆ.ಸಿ.ವೇಣುಗೋಪಾಲ್ ಅವರು ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಇಂದು ರಾತ್ರಿ ಅಥವಾ ಮಂಗಳವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.