ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿರುವಂತೆ ಆಡಳಿತಾರೂಢ ಕಾಂಗ್ರೆಸ್ ತನ್ನ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಪಕ್ಷದ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ವೇಣುಗೋಪಾಲ್ ಇದೇ ಮೊದಲ ಬಾರಿಗೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಮೂರು ದಿನಗಳ ಪ್ರವಾಸದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಂದ ಹಿಡಿದು ತಳಮಟ್ಟದ ಪದಾಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ. ವೇಣುಗೋಪಾಲ್ ಜೊತೆಗೆ ನಾಲ್ವರು ಎಐಸಿಸಿ ಕಾರ್ಯದರ್ಶಿಗಳು ಆಗಮಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಣುಗೋಪಾಲ್ ತಂಡವನ್ನ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
Advertisement
ಇವತ್ತು ಕುಮಾರಕೃಪ ಅತಿಥಿ ಗೃಹದಲ್ಲಿ ಸಿಎಂ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ಪ್ರಾರಂಭವಾಗಲಿದೆ. ಪಕ್ಷ ಸಂಘಟನೆಯ ಜೊತೆಗೆ 2018ರ ಚುನಾವಣೆಗೆ ತಂಡವನ್ನು ರಚಿಸುವುದು ಹಾಗೂ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
Advertisement
ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮಂಗಳವಾರ ಹಿರಿಯ ಕಾಂಗ್ರೆಸ್ ನಾಯಕರು, ಸಂಸದರು, ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆ ಪ್ರತ್ಯೇಕ ಸಭೆ ನಡೆಯಲಿದೆ. ಬುಧವಾರ ಸಮನ್ವಯ ಸಮಿತಿ ಸಭೆ ನಡೆಯಲಿದೆ.