ಬೆಳಗಾವಿ: ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ನೆರವೇರಿತು.
ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಸಂತೋಷ್ ಪಾಟೀಲ್ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ಹೈಡ್ರಾಮಾ
ಇಂದು ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಅಂತ್ಯಕ್ರಿಯೆ ನೆರವೇರಿಸಿ ಎಂದು ಗ್ರಾಮಸ್ಥರು ಕೋರಿದರು. ಅಲ್ಲದೇ ಸಂಬಂಧಿಕರು ಕೂಡ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದರು. ನ್ಯಾಯಕ್ಕಾಗಿ ಹೋರಾಟ ಮಾಡೋಣ. ಬಾಕಿ ಬಿಲ್ ಮಂಜೂರಾತಿ ಹಾಗೂ ಕುಟುಂಬಸ್ಥರ ಪರಿಹಾರಕ್ಕೆ ಸರ್ಕಾರಕ್ಕೆ ಆಗ್ರಹಿಸೋಣ. ಆದರೆ ಅಂತ್ಯಕ್ರಿಯೆ ನೆರವೇರಿಸಲು ಅನುವು ಮಾಡಿಕೊಡುವಂತೆ ಕೋರಿದರು. ಇದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು. ಬಳಿಕ ಗ್ರಾಮದಲ್ಲಿ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತರಲಾಯಿತು. ಲಿಂಗಾಯತ ವಿಧಿವಿಧಾನಗಳ ಮೂಲಕ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಶವದ ಮುಂದೆ ಕಾಂಗ್ರೆಸ್ ಧರಣಿ
ವಿಧಿವಿಧಾನಗಳು ಮುಗಿಯುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಅಡಿವೇಶ ಇಟಗಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದರು. ಪರಿಹಾರ ಘೋಷಣೆ ಮಾಡಬೇಕು ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಇಲ್ಲವೇ ಬಿಜೆಪಿ ಮುಖಂಡರು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ಇದನ್ನೂ ಓದಿ: ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹ
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಅಡಿವೇಶ ಇಟಗಿಗೆಗೆ ಸಾಥ್ ನೀಡಿದರು. ಗ್ರಾಮಸ್ಥರು ಪ್ರತಿಭಟನೆಯನ್ನು ವಿರೋಧಿಸಿದರು. ನ್ಯಾಯಕ್ಕಾಗಿ ಹೋರಾಡೋಣ, ಈಗ ಅಂತ್ಯಕ್ರಿಯೆ ನೆರವೇರಿಸೋಣ ಎಂದರು. ಅಡಿವೇಶ ಇಟಗಿಯನ್ನು ಎಳೆದು ಪಕ್ಕಕ್ಕ ಕರೆತರಲಾಯಿತು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜೆಸಿಬಿ ಮೂಲಕ ಶವದ ಮೇಲೆ ಮಣ್ಣು ಹಾಕಲಾಯಿತು.