ರಾಂಚಿ: ಜಾರ್ಖಂಡ್‌ನಲ್ಲಿ (Jharkhand) ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ವಿರುದ್ಧ ಸಾವಿರಾರು ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ (Students Protest) 17ನೇ ದಿನಕ್ಕೆ ಕಾಲಿಟ್ಟಿದೆ. ಇಂದು (ಆ.10) ಬೆಳಿಗ್ಗೆ ಪ್ರತಿಭಟನಾಕಾರರು ವಿಧಾನಸೌಧದೆಡೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ್ದಾರೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ 51 ನೇ ಹುಟ್ಟುಹಬ್ಬದ ದಿನವಾದ ಇಂದು ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ ವಿಧಿಸಲಾಗಿದೆ. ಸುಮಾರು 4 ಕಿ.ಮೀ ಸಂಪೂರ್ಣ ಪ್ರದೇಶದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳು ಪ್ರತಿಭಟನೆಯ ಮೇಲೆ ನಿಗಾವಹಿಸಿದ್ದಾರೆ. ಇದನ್ನೂ ಓದಿ: Gen Z ಪ್ರತಿಭಟನೆ ನಡುವೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ JPSC ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಭಾರೀ ಪ್ರಮಾಣದ ಬ್ಯಾರಿಕೇಡ್ ಅಳವಡಿಸಿದ್ದಾರೆ. ಅಲ್ಲದೇ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ (Water Cannons) ಪ್ರಯೋಗಿಸಿದ್ದಾರೆ. ಆದರೂ ಪ್ರತಿಭಟನಾಕಾರರ ತಮ್ಮ ರ‍್ಯಾಲಿಯನ್ನು ಮುಂದುವರಿಸಿದ್ದಾರೆ.
ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎನ್ನಲಾಗಿದೆ. ಇದರಿಂದಾಗಿ ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಈ ಹೋರಾಟಕ್ಕೆ ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ, 10.5 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಆದರೂ ಇಂದಿನ ರ‍್ಯಾಲಿಗೆ ಆಂಬ್ಯುಲೆನ್ಸ್‌ನಲ್ಲಿ ಆಗಮಿಸಿದ್ದಾರೆ. ರ‍್ಯಾಲಿಯಲ್ಲಿ ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಮತ್ತು ಸರ್ಕಾರದ ವಿರುದ್ಧ ಘೋಷಣಾ ಫಲಕಗಳನ್ನು ಹಿಡಿದು ತಮ್ಮ ಬೇಡಿಕೆ ಇಡೇರಿಸುವಂತೆ ಘೋಷಣೆ ಕೂಗಿದ್ದಾರೆ.
ಪ್ರತಿಭಟನೆ ಬಗ್ಗೆ ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, “ದೆಹಲಿಯಲ್ಲಿ ವಿದ್ಯಾರ್ಥಿಗಳ ಚಳವಳಿಯನ್ನು ರಾಜಕೀಯವಾಗಿ ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದ ಆ ನಾಯಕರು ಈಗ ಎಲ್ಲಿದ್ದಾರೆ?” ಎಂದು ಪ್ರಶ್ನಿಸಿದರು. ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮೈತ್ರಿಕೂಟ ನೇತೃತ್ವದ ಸರ್ಕಾರ ಇರುವುದರಿಂದ ರಾಹುಲ್ ಗಾಂಧಿಯವರಿಗೆ ವಿದ್ಯಾರ್ಥಿಗಳ ಮಾತನ್ನು ಕೇಳಲು ಸಮಯವಿಲ್ಲ ಎಂದು ಅವರು ಕುಟುಕಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ – JPSC ಪರೀಕ್ಷೆ ರದ್ದುಪಡಿಸಲು ಸಿದ್ಧತೆ
