ರಾಯಚೂರು: ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.
ರಾಯಚೂರಿನ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ವೈದ್ಯರ ವಿಶೇಷ ತಂಡ ರಚನೆ ಮಾಡಲಾಗಿದೆ. ರಿಮ್ಸ್ ಆಸ್ಪತ್ರೆಯ ಎರಡನೇ ಮಹಡಿಯ 242ನೇ ಸಂಖ್ಯೆಯ ಕೋಣೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದ್ದು, 5 ಹಾಸಿಗೆಯನ್ನು ವ್ಯವಸ್ಥೆ ಮಾಡಲಾಗಿದೆ.
ಸಾಮಾನ್ಯ ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡರು ಕೊರೊನಾ ವೈರಸ್ ಇರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ವೈದ್ಯರು ಚಿಕಿತ್ಸೆ ಬೇಕಾಗಿರುವ ಅಗತ್ಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆಮ್ಲಜನಕ, ವೆಂಟಿಲೇಶನ್, ಮಾಸ್ಕ್, ಔಷಧಿ, ಗ್ಲೌಸ್, ಬೆಡ್ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ಹೈದರಾಬಾದ್, ತೆಲಂಗಾಣದಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲು ಶಕ್ತಿನಗರ, ಸಿಂಗನೋಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕೇಂದ್ರ ತೆರೆಯಲಾಗಿದೆ. ಜ್ವರ, ಕೆಮ್ಮು ಇರುವ ರೋಗಿಗಳ ಬಗ್ಗೆ ಹೆಚ್ಚು ನಿಗಾವಹಿಸಲಾಗುತ್ತಿದೆ.
ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಂಶಯಾಸ್ಪದ ರೋಗಿಗಳ ರಕ್ತ ನಮೂನೆಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಆರೋಗ್ಯ ಇಲಾಖೆ, ರಿಮ್ಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ತುರ್ತು ಸಭೆ ಕರೆದು ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಂಡು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದ್ದಾರೆ.