– ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಥರ್ಮಲ್ ಸ್ಕ್ಯಾನರ್ ನೀಡಿ
– 263 ಜನರ ಸ್ಯಾಂಪಲ್ ಪರೀಕ್ಷೆ, ಎಲ್ಲವೂ ನೆಗೆಟಿವ್
– ಜಿಲ್ಲೆಯಲ್ಲಿ ಈ ವರೆಗೆ ಯಾವುದೇ ಕೊರೊನಾ ಪ್ರಕರಣವಿಲ್ಲ
ಕೊಪ್ಪಳ: ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೆ ತೆರಳಿ ಥರ್ಮಲ್ ಸ್ಕ್ಯಾನರ್ ಬಳಸಿ ಪ್ರತಿಯೊಬ್ಬರ ಆರೋಗ್ಯ ಪರೀಕ್ಷಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ವರೆಗೆ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿಲ್ಲ. ಆದರೂ ಸೋಂಕು ಪತ್ತೆ ಹಚ್ಚಲು ಎಲ್ಲರನ್ನೂ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕೆಂದು ಸರ್ಕಾರ ಸೂಚಿಸಿದ್ದು, ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೆ ತೆರಳಿ ಕುಟುಂಬ ಸದಸ್ಯರ ಆರೋಗ್ಯ ತಪಾಸಣೆ ಮಾಡಬೇಕು. ಅವರಿಗೆ ಅವಶ್ಯವಾಗಿ ಬೇಕಾದ ಥರ್ಮಲ್ ಸ್ಕ್ಯಾನರ್ ಗಳನ್ನು ಪ್ರತಿ ಪಂಚಾಯಿತಿಗೆ ಎರಡರಂತೆ ಒದಗಿಸಬೇಕು ಎಂದರು.
Advertisement
Advertisement
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಜಿಲ್ಲಾಸ್ಪತ್ರೆಯನ್ನು ಕೋವಿಡ್ 19 ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ. ಹೀಗಾಗಿ ಸಾಮಾನ್ಯ ಖಾಯಿಲೆಗಳಿಗೆ ಚಿಕಿತ್ಸೆ ನೀಡಲು ಪರ್ಯಾಯವಾಗಿ ವ್ಯವಸ್ಥೆ ಮಾಡಲಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡಿ. ಔಷಧ ಮತ್ತು ಇತರ ವೈದ್ಯಕೀಯ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಒದಗಿಸಿ. ಜಿಲ್ಲೆಯಲ್ಲಿನ ಸರ್ಕಾರಿ ವೈದ್ಯರನ್ನು ಕೋವಿಡ್ ಚಿಕಿತ್ಸೆಗೆಂದು ನಿಯೋಜಿಸಿರುವದರಿಂದ ಪರ್ಯಾಯ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗಬಹುದು. ಆಸ್ಪತ್ರೆಗಳಲ್ಲಿ ಅಗತ್ಯ ಸಂಖ್ಯೆಯ ವೈದ್ಯರನ್ನು ಪಾಳಿ ಪ್ರಕಾರ ನಿಯೋಜಿಸಿ ರೋಗಿಗಳಿಗೆ ತೊಂದರೆ ಆಗದಂತೆ ಕ್ರಮ ವಹಿಸಿ. ಕೋವಿಡ್ ಸೋಂಕಿತರು ಪತ್ತೆಯಾದಲ್ಲಿ ಅವರ ಚಿಕಿತ್ಸೆಗೆ ಬೇಕಾದ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಅಗತ್ಯವಿದ್ದಲ್ಲಿ ವೈದ್ಯರನ್ನು ನೇಮಕ ಮಾಡಿಕೊಳ್ಳಿ. ಕೊರೊನಾ ಚಿಕಿತ್ಸೆಗೆ ತಜ್ಞರಿಂದ ವೈದ್ಯರಿಗೆ ಸೂಕ್ತ ತರಬೇತಿ ಕೊಡಿಸಿ. ವೆಂಟಿಲೇಟರ್‍ಗಳ ನಿರ್ವಹಣೆ ಕುರಿತು ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿ ಚಿಕಿತ್ಸೆಗೆ ಸಿದ್ಧಗೊಳಿಸಿ. ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಚಿಕಿತ್ಸೆ ಹಾಗೂ ವೈದ್ಯರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ವೈದ್ಯಕೀಯ ಸಲಕರಣೆಗಳನ್ನು ಖರೀದಿಸಿ ಎಂದರು.
Advertisement
Advertisement
ಜಿಲ್ಲೆಯ ತೋಟಗಾರಿಕೆ ಬೆಳೆಗಳನ್ನು ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ರಫ್ತು ಮಾಡಲು ಕ್ರಮ ಕೈಗೊಂಡು ರೈತರಿಗೆ ಅನುಕೂಲ ಮಾಡಿಕೊಡಿ. ಜಿಲ್ಲೆಯ ಗಡಿ ಭಾಗಗಳಲ್ಲಿ ಸ್ಯಾನಿಟೈಸರ್ ಟನಲ್‍ಗಳನ್ನು ಸ್ಥಾಪಿಸಿ ಬೇರೆ ಜಿಲ್ಲೆ, ರಾಜ್ಯಗಳಿಂದ ಬರುವ ಸರಕು ಸಾಗಣೆ ವಾಹನಗಳ ಚಾಲಕರು ಮತ್ತಿತರರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳಿ. ಎಲ್ಲ ಚೆಕ್‍ಪೋಸ್ಟ್‍ಗಳಲ್ಲೂ ನಿಯಮ ಮೀರಿ ಯಾವ ವಾಹನಗಳನ್ನೂ ಬಿಡಬೇಡಿ. ವೈದ್ಯಕೀಯ ಚಿಕಿತ್ಸೆ ಸೇರಿದಂತೆ ತುರ್ತು ವಿಷಯಗಳಿಗಾಗಿ ಜಿಲ್ಲೆಯ ಗಡಿ ದಾಟಿ ಹೋಗಬೇಕಾದಾಗ ಅವರ ವಸ್ತು ಸ್ಥಿತಿಯನ್ನು ಪರಿಶೀಲಿಸಿ ಪಾಸ್ ನೀಡಿ ಎಂದು ತಿಳಿಸಿದರು.
ಜಿಲ್ಲೆಯ ಶಾಸಕರು ಶಿಫಾರಸ್ಸು ಮಾಡಿರುವ ಪ್ರಕರಣಗಳಲ್ಲಿ ಅವಶ್ಯಕತೆಯನ್ನು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ (ಅತ್ಯಂತ ತುರ್ತು ಇರುವ ಪ್ರಕರಣಗಳಲ್ಲಿ) ಪಾಸ್‍ಗಳನ್ನು ಒದಗಿಸಿ. ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಮನೆ ಮನೆಗೆ ತೆರಳಿ ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ. ಅದರೊಂದಿಗೆ ದಿನಸಿ ಅಂಗಡಿಗಳನ್ನು ತೆರೆದಿಡುವ ಸಮಯವನ್ನು ವಿಸ್ತರಿಸಿ. ಅಗತ್ಯವಿದ್ದವರು ದಿನಸಿ ಅಂಗಡಿಗಳಿಂದಲೇ ಖರೀದಿಸಲಿ. ಈಗಾಗಲೇ ಪಡಿತರ ಚೀಟಿ ಹೊಂದಿರುವವರಿಗೆ ಹಾಗೂ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಸರ್ಕಾರದಿಂದ ಪಡಿತರ ನೀಡಲಾಗುತ್ತಿದೆ. ಪಡಿತರ ಚೀಟಿ ಇಲ್ಲದವರು ಹಾಗೂ ಅರ್ಜಿ ಸಲ್ಲಿಸದವರಿಗೆ ದಾನಿಗಳಿಂದ ಪಡೆದ ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಬೇರೆ ರಾಜ್ಯದ ವಲಸೆ ಕಾರ್ಮಿಕರಿಗೆ ಜಿಲ್ಲೆಯಲ್ಲಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿ ವೈದ್ಯಕೀಯ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ನಿಡಲಾಗುತ್ತಿದೆ. ಏಪ್ರಿಲ್ 20ರ ನಂತರ ಲಾಕ್‍ಡೌನ್ ಕುರಿತು ಹೊಸ ನಿಯಮಾವಳಿಗಳು ಬರುವ ಸಾಧ್ಯತೆ ಇದ್ದು, ಅವುಗಳ ಆಧಾರದಲ್ಲಿ ವಲಸೆ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ಕಳುಹಿಸಿಕೊಡುವ ಬಗ್ಗೆ, ಜಿಲ್ಲೆಯಲ್ಲಿ ಲಾಕ್‍ಡೌನ್ ನಿಯಮಗಳಲ್ಲಿ ಯಾವ ವಿಷಯಗಳಲ್ಲಿ ವಿನಾಯಿತಿ ನೀಡವ ಸಾಧ್ಯತೆ ಕುರಿತು ಪರಿಶೀಲಿಸಿ ನಿರ್ಧರಿಸೋಣ ಎಂದರು.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಮಾತನಾಡಿ, ಕೋವಿಡ್-19 ಸೋಂಕಿನ ಕುರಿತಂತೆ ಈ ವರೆಗೆ 263 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರಲ್ಲಿ 4 ಜನರು ವಿದೇಶ ಪ್ರಯಾಣದ ಹಿನ್ನೆಲೆಯುಳ್ಳವರು, 25 ಜನ ತಬ್ಲೀಘಿ ಜಮಾತ್‍ಗೆ ಸಂಬಂಧಿಸಿದವರು, ರಾಜಸ್ಥಾನಕ್ಕೆ ತೆರಳಿದ್ದ ಕಾರಟಗಿಯ 8 ಜನರ ಸ್ಯಾಂಪಲ್‍ಗಳು ಸೇರಿದಂತೆ 263 ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ಎಲ್ಲ ಸ್ಯಾಂಪಲ್‍ಗಳೂ ನೆಗೆಟಿವ್ ಎಂದು ವರದಿ ಬಂದಿವೆ. ಇನ್ನೂ ನಾಲ್ಕು ಸ್ಯಾಂಪಲ್‍ಗಳ ವರದಿ ಬರುವುದು ಬಾಕಿ ಇದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪ್ರತಿ ಒಂದು ಲಕ್ಷ ಜನರಿಗೆ 19 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿಲಾಗಿದೆ. ಸ್ಯಾಂಪಲ್‍ಗಳ ಪರೀಕ್ಷೆ ಪ್ರಮಾಣದಲ್ಲಿ ಜಿಲ್ಲೆಯು ರಾಜ್ಯದಲ್ಲಿ 13 ನೇ ಸ್ಥಾನದಲ್ಲಿದೆ. ಸರ್ಕಾರ ನೀಡಿದ ಸೂಚನೆಯಂತೆ ಏಪ್ರಿಲ್ 19 ರವರೆಗೆ ದಿನನಿತ್ಯ 100 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ನಂತರ ನಿತ್ಯ 50 ರಂತೆ ಸ್ಯಾಂಪಲ್‍ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ವಿವರಿಸಿದರು.