– ಕೊರೊನಾ ಎದುರಿಸಲು ಜಿಲ್ಲಾಡಳಿತ ಸನ್ನದ್ಧ
ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಭೆ ನಡೆಸಿದರು. ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಕೊರೊನಾ ವಾರ್ಡ್ ವೀಕ್ಷಿಸಿ, ಕೊರೊನಾ ವೈರಸ್ ಪ್ರಕರಣಗಳ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದ್ದು, ಜನ ಗಾಬರಿಯಾಗುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಈ ವರೆಗೆ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಮೂರು ಶಂಕಿತ ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿವೆ. ಜಿಲ್ಲೆಯಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಿಮ್ಸ್ ನಲ್ಲಿ 30 ಹಾಸಿಗೆಯ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲಾಗಿದೆ. ವೈದ್ಯಾಧಿಕಾರಿಗಳ ತಂಡ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
Advertisement
Advertisement
ಕೊರೊನಾ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರುವ ಎಲ್ಲ ಕಾರ್ಯಕ್ರಮಗಳನ್ನು ಕೈಬಿಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಮುಂದಿನ 15 ದಿನಗಳ ಕಾಲ ಯಾವುದೇ ಜಾತ್ರೆಗಳನ್ನು ನಡೆಸದಂತೆ ತಿಳಿಸಲಾಗಿದ್ದು, ಈ ಕುರಿತು ಸಂಬಂಧಪಟ್ಟವರಿಗೆ ಸೂಕ್ತ ಮಾಹಿತಿಯನ್ನು ನೀಡಬೇಕು. ದೊಡ್ಡ ಪ್ರಮಾಣದ ಯಾವುದೇ ಸಭೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತಿಳಿಸಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
Advertisement
Advertisement
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹಾಗೂ ಇತರರು ಇದ್ದರು.