ದಾವಣಗೆರೆ: ನಗರದ ಜಗಳೂರು ರಸ್ತೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಬಳಿ ಬೆಳ್ಳಂಬೆಳಗ್ಗೆಯೇ ಪಾಲಿಕೆ ಜೆಸಿಬಿಗಳು ಘರ್ಜಿಸಿದ್ದು, ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಹಲವು ಅಂಗಡಿಗಳನ್ನು ತೆರವುಗೊಳಿಸಿದ್ದಾರೆ.
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಅಕ್ರಮ ತೆರವು ಕಾರ್ಯಾಚರಣೆ ನಡೆದಿದ್ದು, ನಿಲ್ದಾಣದಲ್ಲಿದ್ದ ಹೋಟೆಲ್, ಗೂಡಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಜೆಸಿಬಿ ಸಹಾಯದಿಂದ ತೆರವುಗೊಳಿಸಿದ್ದಾರೆ. ಹಲವು ವರ್ಷಗಳಿಂದ ಬಸ್ ನಿಲ್ದಾಣವನ್ನು ನಂಬಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ತೆರವು ಕಾರ್ಯದಿಂದ ಬೀದಿಗೆ ಬಿದ್ದಿದ್ದಾರೆ.
ತೆರವು ಕಾರ್ಯಾಚರಣೆಗೆ ವ್ಯಾಪಾರಸ್ಥರು ಆಕ್ರೋಶವ್ಯಕ್ತಪಡಿಸಿದ್ದು, ನಮಗೆ ಯಾವುದೇ ಸೂಚನೆಯನ್ನು ನೀಡದೇ ಏಕಾಏಕಿ ತೆರವು ಮಾಡುತ್ತಿದ್ದಾರೆ. ನಮ್ಮ ಮುಂದಿನ ಗತಿ ಏನು, ನಾವು ಇದನ್ನೇ ನಂಬಿಕೊಂಡು ಜೀವನ ಮಾಡುತ್ತಿದ್ದೇವು. ಆದರೆ ಈಗ ನಮ್ಮ ಜೀವನ ಬೀದಿಪಾಲಾಗಿದೆ ಎಂದು ಹೇಳಿದ್ದಾರೆ.
ನ್ಯಾಯಾಲಯ ಆದೇಶದ ಮೇರೆಗೆ ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಸಹ ಮಾಡಲಾಗಿದೆ. ಜಿಟಿ ಜಿಟಿ ಮಳೆಯ ನಡುವೆಯೂ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಅಕ್ರಮ ಅಂಗಡಿಗಳನ್ನು ತೆರವುಗೊಳಿಸುವಂತೆ ಕೋರ್ಟ್ ಆದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ವ್ಯಾಪಾರಸ್ಥರಿಗೆ ಈ ಮೊದಲು ನೋಟಿಸ್ ನೀಡಿದ್ದೆವು. ಆದರೆ ನೋಟಿಸ್ ಗೆ ಕ್ಯಾರೆ ಎನ್ನದೆ ವ್ಯಾಪಾರ ಮುಂದುವರೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಖುದ್ದು ತೆರವು ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಪಾಲಿಕೆ ಆಯುಕ್ತರಾದ ಮಂಜುನಾಥ್ ಬಳ್ಳಾರಿ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv