Connect with us

Bengaluru City

10 ದಿನದಲ್ಲಿ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೂ ಲಸಿಕೆ

Published

on

Share this

– ಆಮ್ಲಜನಕ ಟ್ಯಾಂಕ್ ಗೆ ಜಾಗತಿಕ ಟೆಂಡರ್
– ಆಮ್ಲಜನಕ, ಲಸಿಕೆ ವ್ಯವಸ್ಥೆ ಪರಿಶೀಲನೆ ನಡೆಸಿದ ಡಿಸಿಎಂ

ಬೆಂಗಳೂರು: ಇನ್ನು 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೂ ಕೋವಿಡ್ ಲಸಿಕೆ ನೀಡುವುದು ಹಾಗೂ ಅಗಸ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿ 2,800 ಟನ್ ಆಕ್ಸಿಜನ್  ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.

ರಾಜ್ಯದಲ್ಲಿನ ಆಮ್ಲಜನಕ ವ್ಯವಸ್ಥೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವ ಸಂಬಂಧ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರಿದರು. ಇದನ್ನೂ ಓದಿ: ತೆಂಗಿನಮರದ ಕಾಯಿ ಬಿದ್ದು 11 ತಿಂಗಳ ಹಸುಗೂಸು ಸಾವು

 

ಸೋಮವಾರ 94,000 ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಯಿತು. ರಾಜ್ಯದೆಲ್ಲೆಡೆ ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಜವಾಬ್ದಾರಿ ವಹಿಸಲಾಗಿದ್ದು, ಇನ್ನು ಹತ್ತು ದಿನದಲ್ಲಿ ಎಂಜಿನಿಯರಿಂಗ್, ಮೆಡಿಕಲ್, ಪ್ಯಾರಾ ಮೆಡಿಕಲ್, ಡಿಪ್ಲೋಮಾ,  ಜಿಸಿಐಟಿ, ಐಟಿಐ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಚುರುಕಾಗಿ ಲಸಿಕೆ ಕೊಡಲಾಗುವುದು. ಅಲ್ಲದೆ, ಮುಖ್ಯಮಂತ್ರಿಗಳ ಕೌಶಲ್ಯ ಯೋಜನೆ ಅಡಿ ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಜೂನ್ ತಿಂಗಳಲ್ಲಿ 60 ಲಕ್ಷ ಲಸಿಕೆ ನೀಡಲಾಗಿದ್ದು, ಜುಲೈನಲ್ಲಿ ಇನ್ನೂ ಹೆಚ್ಚು ಕೊಡಲಾಗುವುದು. ಈಗಾಗಲೇ ಕೇಂದ್ರದಿಂದ ಉತ್ತಮವಾಗಿ ಲಸಿಕೆ ಪೂರೈಕೆ ಆಗುತ್ತಿದ್ದು, ಖಾಸಗಿ ಕ್ಷೇತ್ರದಿಂದಲೂ ವ್ಯಾಕ್ಸಿನ್ ಪಡೆದು ಜನರಿಗೆ ಕೊಡಲಾಗುವುದು. ಲಸಿಕೆ ಅಭಿಯಾನದಲ್ಲಿ ಇಡೀ ದೇಶದಲ್ಲೇ ರಾಜ್ಯವೂ 3ನೇ ಸ್ಥಾನದಲ್ಲಿದೆ ಎಂದು ಡಾ.ಅಶ್ವಥ್ ನಾರಾಯಣ ತಿಳಿಸಿದರು.

 

ಆಕ್ಸಿಜನ್ ಉತ್ಪಾದನೆ ಮತ್ತು ಸಂಗ್ರಹ:
ಎರಡನೇ ಅಲೆಯ ಸಂಕಷ್ಟ ದೃಷ್ಟಿಯಲ್ಲಿ ಇಟ್ಟುಕೊಂಡು ಮೂರನೇ ಅಲೆಗೆ ಸರ್ವ ಸನ್ನದ್ಧವಾಗಿದೆ ಸರ್ಕಾರ. ಆಮ್ಲಜನಕ ಕೊರತೆ ಆಗದಂತೆ ಕಟ್ಟೆಚ್ಚರ ವಹಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಂಗ್ರಹ ಸಾಮಥ್ರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಸದ್ಯಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ (ಸರ್ಕಾರಿ ಮತ್ತು ಖಾಸಗಿ) ಇಲಾಖೆಗಳ ವ್ಯಾಪ್ತಿಯಲ್ಲಿ 400 ಮೆಟ್ರಿಕ್ ಟನ್ ಆಮ್ಲಜನಕ ಉತ್ಪಾದನೆ ಆಗುವುದಿದೆ. ಕೆಲವೆಡೆ ಈಗಾಗಲೇ ಉತ್ಪಾದನೆ ಆಗುತ್ತಿದ್ದರೆ, ಇನ್ನು ಕೆಲವೆಡೆ ಘಟಕಗಳನ್ನು ಅಳವಡಿಸಲಾಗುತ್ತಿದೆ. ಇನ್ನು ಕೇಂದ್ರ ಸರ್ಕಾರ, ಪಿಎಂ ಕೇರ್, ಸಿಎಸ್‍ಆರ್ ಹಾಗೂ ರಾಜ್ಯ ಸರಕಾರ ಖರೀದಿ ಮಾಡಿರುವ 40 ಸೇರಿ 187 ಆಮ್ಲಜನಕ ಘಟಕಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದೆ. ಇವುಗಳ ಅಳವಡಿಕೆ ಕಾರ್ಯ ವಿವಿಧ ಹಂತಗಳಲ್ಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಕೆಲ ಘಟಕಗಳು ಈ ತಿಂಗಳ ಒಳಗಾಗಿ ಉತ್ಪಾದನೆ ಆರಂಭಿಸುವುದಿದ್ದು, ಉಳಿದವು ಆಗಸ್ಟ್ ನಲ್ಲಿ ಪೂರ್ಣ ಉತ್ಪಾದನೆ ಶುರು ಮಾಡಲಿವೆ. ವೈದ್ಯಕೀಯ ಶಿಕ್ಷಣ ಇಲಾಖೆಗೆ ಕೇಂದ್ರವು ನೀಡಿರುವ 17 ಸೇರಿ ಸಿ ಎಸ್ ಆರ್ ನಿಂದ ಬಂದಿರುವವು ಸೇರಿ 40 ಆಕ್ಸಿಜನ್ ಜನರೇಟರ್ ಗಳಿವೆ. ಇದಲ್ಲದೆ, ರಾಜ್ಯ ಸರ್ಕಾರ 35 ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಆಕ್ಸಿಜನ್ ಜನರೇಟರ್ ಗಳ ಅಳವಡಿಕೆ ಮತ್ತು ಸಂಗ್ರಹಕ್ಕೆ ಆರ್ಥಿಕ ನೆರವು ನೀಡಲಾಗಿದೆ. ಇಲ್ಲಿಯೂ ಕೂಡ ಅಗಸ್ಟ್ ನಿಂದಲೇ ಆಮ್ಲಜನಕ ಉತ್ಪಾದನೆಯಾಗಲಿದೆ. ಒಟ್ಟು 360 ಘಟಕಗಳಿಂದ ಆಮ್ಲಜನಕ ಲಭ್ಯವಾಗಲಿದೆ. ಜತೆಗೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವಿಪತ್ತು ಪರಿಹಾರ ನಿಧಿ, ಸಿಎಸ್ಆರ್ ನೆರವು ಇತ್ಯಾದಿಗಳಿಂದ ಘಟಕಗಳನ್ನು ಹಾಕಲಾಗಿದೆ. ಬುಧವಾರದ ಹೊತ್ತಿಗೆ ಆ ಮಾಹಿತಿ ಸಿಗುತ್ತದೆ. ರಾಜ್ಯದಲ್ಲಿ ನಿಖರವಾಗಿ ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಉತ್ಪಾದನೆ ಆಗುತ್ತದೆ ಎಂಬುದನ್ನು ತಿಳಿದುಕೊಂಡು ಮತ್ತಷ್ಟು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಆಮ್ಲಜನಕ ಸಂಗ್ರಹಕ್ಕೂ ಕ್ರಮ:
ಆಮ್ಲಜಕನ ಉತ್ಪಾದನೆ ಜತೆಗೆ ಅದರ ಅತ್ಯುತ್ತಮ ಸಂಗ್ರಹಣಾ ವ್ಯವಸ್ಥೆಗೂ ಆದ್ಯತೆ ನೀಡಲಾಗಿದೆ ಎಂದ ಡಿಸಿಎಂ, ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲೇ 1806 ಮೆಟ್ರಿಕ್ ಟನ್ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 500 ಮೆಟ್ರಿಕ್ ಟನ್ ಆಮ್ಲಜನಕವನ್ನು ಹೆಚ್ಚುವರಿ ಸಂಗ್ರಹ ಮಾಡುವ ಗುರಿ ಇದ್ದು, ಅದಕ್ಕೆ ಬೇಕಾದ ಎಲ್ಲ ಕ್ರಮವನ್ನು ಈಗಾಗಲೇ ವಹಿಸಲಾಗಿದೆ. ಅಗಸ್ಟ್ ತಿಂಗಳ ಒಳಗೆ ಇದೆಲ್ಲ ಪೂರ್ಣವಾಗಿ ಅನುಷ್ಠಾನಕ್ಕೆ ಬರಲಿದೆ ಎಂದರು.

ಜಾಗತಿಕ ಟೆಂಡರ್
ಆರೋಗ್ಯ ಇಲಾಖೆಯಲ್ಲಿ 1806 ಟನ್ ಸಂಗ್ರಹ ಸಾಮರ್ಥ್ಯದ ಯೋಜನೆಗೆ ಹಣಕಾಸು ಇಲಾಖೆಯ ಒಪ್ಪಿಗೆ ಸಿಕ್ಕ ಕೂಡಲೇ ಜಾಗತಿಕ ಟೆಂಡರ್ ಕರೆಯಲಾಗುವುದು. ನಮ್ಮ ದೇಶದಲ್ಲಿ ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ ಗಳನ್ನು ತಯಾರಿಸುವ ಎರಡೇ ಕಂಪೆನಿಗಳಿರುವ ಕಾರಣಕ್ಕೆ ಗ್ಲೋಬಲ್ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಹೇಳಿದರು.

ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ತಲಾ 6 ಮೆ.ಟನ್ ಹಾಗೂ ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ತಲಾ 20 ಮೆ.ಟನ್ ಸಂಗ್ರಹ ಮಾಡುವ ಗುರಿ ಇದೆ. ಕೆಲ ಮೆಡಿಕಲ್ ಕಾಲೇಜ್ ಗಳಲ್ಲಿ 40-50 ಮೆ.ಟನ್ ಸಂಗ್ರಹ ಸಾಮರ್ಥ್ಯವುಳ್ಳ ಆಕ್ಸಿಜನ್ ಟ್ಯಾಂಕರ್ ಗಳಿವೆ. ಇಂಥ ಟ್ಯಾಂಕರ್ ಗಳನ್ನು ತಯಾರಿಸಲು ಈ ಟೆಂಡರ್ ಕರೆಯಲಾಗುತ್ತಿದೆ. ಈ ಎಲ್ಲ ಲೆಕ್ಕದಂತೆ 2,500-2,800 ಟನ್ ಆಕ್ಸಿಜನ್ ಸಂಗ್ರಹ ಮಾಡುವ ವ್ಯವಸ್ಥೆ ರಾಜ್ಯದಲ್ಲಿ ಆಗಲಿದೆ. ಜತೆಗೆ ಜಂಬೋ ಮತ್ತು ಡ್ಯೂರಾ ಸಿಲಿಂಡರ್ ಗಳ ಮೂಲಕ 45 ಟನ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ಅಲ್ಲದೆ, 9 ಜಿಲ್ಲೆಗಳಲ್ಲಿ ಆಕ್ಸಿಜನ್ ರೀ ಫಿಲ್ಲಿಂಗ್ ಸೌಲಭ್ಯ ಇಲ್ಲ, ಅದನ್ನೂ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಜತೆಗೆ, ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲೇ ಆಕ್ಸಿಜನ್ ಸಂಗ್ರಹ ಘಟಕಗಳಿಲ್ಲ. ಕೂಡಲೇ ಅಳವಡಿಸಿಕೊಳ್ಳಬೇಕು ಎಂದು ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಆಕ್ಸಿಜನ್ ಬೆಡ್ ಸಂಖ್ಯೆಯೂ ಹೆಚ್ಚಳ:
ರಾಜ್ಯದಲ್ಲಿ ಈಗ 58,000 ಆಕ್ಸಿಜನ್ ಬೆಡ್ ಗಳಿದ್ದು, ಈ ಪ್ರಮಾಣವನ್ನು 84,000ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗಿದೆ. ಜತೆಗೆ, ಎಲ್ಲ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಐಸಿಯು ಘಟಕಗಳನ್ನು ಆದ್ಯತೆಯ ಮೇರೆಗೆ ಅಳವಡಿಸಲಾಗುತ್ತಿದೆ ಎಂದರು.

ಅರಿವಳಿಕೆ ತಜ್ಞ ಡಾ.ರಾಘವೇಂದ್ರ ನೇತೃತ್ವದ ಆಮ್ಲಜನಕ ನಿರ್ವಹಣೆ ಸಮಿತಿ ವರದಿ ನೀಡಿದ್ದು ಆ ಪ್ರಕಾರ ಮೂಲಸೌಕರ್ಯ ಕಲ್ಪಿಸಲು ಕ್ರಮ ಜರುಗಿಸಲಾಗಿದೆ ಎಂದರು.

ಆರೋಗ್ಯ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಲಸಿಕೆ ಉಸ್ತುವಾರಿ ಅಧಿಕಾರಿ ವಂದಿತಾ ಶರ್ಮಾ, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅನಿಲ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Click to comment

Leave a Reply

Your email address will not be published. Required fields are marked *

Advertisement