Connect with us

Belgaum

20 ಮಂದಿ ಕನ್ನಡ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಕೇಸ್

Published

on

ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡ ಸಂಘಟನೆಗಳ 20 ಮಂದಿ ಕಾರ್ಯಕರ್ತರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕಲಾಗಿದೆ.

ದೊಂಬಿ, ಅತಿಕ್ರಮ ಪ್ರವೇಶ, ಮಾರಕಾಸ್ತ್ರಗಳೊಂದಿಗೆ ಗಲಭೆ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಅಡಿ ಆರೋಪ ಸಾಬೀತಾದರೆ ಕನಿಷ್ಠ 3 ತಿಂಗಳಿಂದ 3 ವರ್ಷದವರೆಗೆ ಜೈಲು ಶಿಕ್ಷೆ ಆಗುವ ಸಾಧ್ಯತೆಯಿದೆ.

ಆದರೆ ಕನ್ನಡ ಕನ್ನಡ ಧ್ವಜಕ್ಕೆ ಚಪ್ಪಲಿ ಎಸೆದವರೊಂದಿಗೆ ಸಂಧಾನ ಮಾಡಲು ಸರ್ಕಾರ ಮುಂದಾಗಿದ್ದು ಟೀಕೆಗೆ ಗುರಿಯಾಗಿದೆ. ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸಭೆ ನಡೆಸುತ್ತಿರುವುದು ಎಷ್ಟು ಸರಿ ಎಂದು ಜನ ಪ್ರಶ್ನಿಸಿ ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಟ್ವೀಟ್‌ ಮಾಡಿ ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ‌ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು, ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ. ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ಕನ್ನಡಿಗರೆಂದರೆ -ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ ಎಂದು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *