ನವದೆಹಲಿ: ಅಬುಧಾಬಿಯ (Abu Dhabi) ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (Sheikh Khaled bin Mohamed bin Zayed Al Nahya) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಹ್ವಾನದ ಮೇರೆಗೆ ಭಾರತಕ್ಕೆ (India) ಮೊದಲ ಅಧಿಕೃತ ಭೇಟಿ ನೀಡಿದ್ದಾರೆ. ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ವಿಮಾನ ನಿಲ್ದಾಣದಲ್ಲಿ ಗಣ್ಯರನ್ನು ಔಪಚಾರಿಕವಾಗಿ ಸ್ವಾಗತಿಸಿದರು.
ಅಬುಧಾಬಿಯ ಯುವರಾಜರಾದ ನಂತರ ಜಾಯೆದ್ ಅಲ್ ನಹ್ಯಾನ್ ಅವರ ಮೊದಲ ಭಾರತ ಭೇಟಿ ಇದಾಗಿದೆ ಮತ್ತು ಯುಎಇ ಸರ್ಕಾರದ ಹಲವಾರು ಸಚಿವರು ಮತ್ತು ವ್ಯಾಪಾರ ನಿಯೋಗಗಳು ಅವರೊಂದಿಗೆ ಆಗಮಿಸಿವೆ. ಯುವರಾಜ ನಹ್ಯಾನ್ ಸೆ.9ರಂದು ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದು, ದ್ವಿಪಕ್ಷೀಯ ಸಹಕಾರದ ವ್ಯಾಪಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ ಮತ್ತು ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಲಿದ್ದಾರೆ.
ಸೆಪ್ಟೆಂಬರ್ 10ರಂದು ನಹ್ಯಾನ್ ಮುಂಬೈಗೆ ಭೇಟಿ ನೀಡಲಿದ್ದು, ವ್ಯಾಪಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಎರಡೂ ದೇಶಗಳ ಉದ್ಯಮಿಗಳು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಭಾರತ ಮತ್ತು ಯುಎಇ ಐತಿಹಾಸಿಕವಾಗಿ ನಿಕಟ ಮತ್ತು ಸ್ನೇಹಪರ ಸಂಬಂಧಗಳನ್ನು ಹೊಂದಿವೆ. ಇತ್ತೀಚಿನ ವರ್ಷಗಳಲ್ಲಿ, ಭಾರತ ಮತ್ತು ಯುಎಇ ನಡುವೆ ರಾಜಕೀಯ, ವ್ಯಾಪಾರ ಕ್ಷೇತ್ರಗಳಲ್ಲಿ ಸಂಬಂಧ ಬಲಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಜನವರಿಯಲ್ಲಿ, ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಭಾರತಕ್ಕೆ ಭೇಟಿ ನೀಡಿ ಮೋದಿ ಅವರೊಂದಿಗಿನ ಚರ್ಚೆಯ ಸಮಯದಲ್ಲಿ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ವಿಷಯಗಳ ಬಗ್ಗೆ ಚರ್ಚಿಸಿದ್ದರು. ಅಲ್ಲದೆ ಅವರು ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯ 10 ನೇ ಆವೃತ್ತಿಯಲ್ಲಿ ಭಾಗವಹಿಸಿದ್ದರು.