ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ(Tamil Nadu) ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ(Karnataka) ಸರ್ಕಾರಕ್ಕೆ ಪ್ರಾಧಿಕಾರ ಸೂಚನೆ ನೀಡಿದೆ.
ದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಇಂದು ಸುಮಾರು ಒಂದೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ACS) ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (MD) ಮಹೇಶ್ ಭಾಗವಹಿಸಿದ್ದರು. ತಮಿಳುನಾಡಿನ ಪರವಾಗಿ ನೀರಾವರಿ ಕಾರ್ಯದರ್ಶಿ ಪ್ರಶಾಂತ್ ಮತ್ತು ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯಂ ಪಾಲ್ಗೊಂಡಿದ್ದರು.
ನಿನ್ನೆ ಸಿಡಬ್ಲ್ಯೂಆರ್‌ಸಿ ನೀಡಿದ್ದ ದಿನಂಪ್ರತಿ 9,000 ಕ್ಯೂಸೆಕ್ ನೀರು ಹರಿಸುವಂತೆ ಮಾಡಿದ್ದ ಶಿಫಾರಸನ್ನು ಸಿಡಬ್ಲ್ಯೂಎಂಎ ಎತ್ತಿಹಿಡಿದಿದ್ದು, ಅದನ್ನು ಪಾಲಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ಕೊಡಗಿನಲ್ಲಿ ವರುಣನ ಅಬ್ಬರ – ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಸಭೆಯಲ್ಲಿ ತಮಿಳುನಾಡು ಸರ್ಕಾರವು ಹೆಚ್ಚುವರಿಯಾಗಿ 28 ಟಿಎಂಸಿ ನೀರು ಬಿಡುವಂತೆ ಬೇಡಿಕೆ ಇಟ್ಟಿತ್ತು. ಆದರೆ, ಸಿಡಬ್ಲ್ಯೂಎಂಎ ಈ ಬೇಡಿಕೆಯನ್ನು ಸಾರಾಸಗಟಾಗಿ ತಿರಸ್ಕರಿಸಿದೆ.
ಮುಂದಿನ ದಿನಗಳಲ್ಲಿ ಕಾವೇರಿ ಕಣಿವೆಯಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಮಾಡುವಂತೆ ಪ್ರಾಧಿಕಾರ ಸೂಚಿಸಿದೆ.
ಸಭೆಯ ನಂತರ ಕರ್ನಾಟಕ ಭವನದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಗೌರವ್ ಗುಪ್ತಾ ಮಾತನಾಡಿ, ಪ್ರಾಧಿಕಾರವು ನಿನ್ನೆಯ ಶಿಫಾರಸನ್ನೇ ಪಾಲಿಸಲು ತಿಳಿಸಿದೆ. ಈ ಸಭೆಯ ಸಂಪೂರ್ಣ ಬೆಳವಣಿಗೆ ಹಾಗೂ ವಿವರಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಮುಂದಿನ ಕಾನೂನು ಹೋರಾಟದ ಬಗ್ಗೆ ನಮ್ಮ ಕಾನೂನು ತಜ್ಞರ ತಂಡ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
