ಸರ್ಕಾರಿ ಶಾಲೆ ದತ್ತು ಪಡೆದುಕೊಂಡ ಡಿಬಾಸ್ ಫ್ಯಾನ್ಸ್

Public TV
1 Min Read
HSN Darshan 1

ಹಾಸನ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಇದನ್ನೂ ಓದಿ: ‘ಡಿ’ ಕಂಪನಿಯ ‘ದಿನಕರೋತ್ಸವ’ದಲ್ಲಿ ಟಕ್ಕರ್!

HSN School

ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

HSN School A

ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.

Share This Article