ಕಾರವಾರ: ಹಿರಿಯ ವಕೀಲ ದಾಂಡೇಲಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷನನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಲಾಂಗ್ ನಿಂದ ಹಲ್ಲೆ ನಡೆಸಿ ಬರ್ಬರ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಅಜಿತ್ ನಾಯ್ಕ್ ಕೊಲೆಯಾದ ವ್ಯಕ್ತಿಯಾಗಿದ್ದು, ರಾತ್ರಿ ವೇಳೆ ತಮ್ಮ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿ ಲಾಂಗ್ ನಿಂದ ಹಲ್ಲೆಗೈದು, ಕೊಲೆ ಮಾಡಿ ಪರಾರಿಯಾಗಿದ್ದಾನೆ. ವಕೀಲರಾಗಿ ವೃತ್ತಿ ಆರಂಭಿಸಿದ ಅಜಿತ್ ಅವರು ದಾಂಡೇಲಿ ತಾಲೂಕು ಹೋರಾಟದಲ್ಲಿ ಸಕ್ರಿಯರಾಗಿದ್ದು, ಹೋರಾಟ ಸಮಿತಿಯ ಅಧ್ಯಕ್ಷರಾಗಿದ್ದರು.
Advertisement
ಇದಲ್ಲದೇ ರಾಜಕೀಯದಲ್ಲಿ ಕೂಡ ತಮ್ಮನ್ನು ಗುರುತಿಸಿಕೊಂಡಿದ್ದರು. ದಾಂಡೇಲಿ ನಗರಸಭಾ ಅಧ್ಯಕ್ಷರಾಗಿ, ಸದಸ್ಯರಾಗಿ ಕಾರ್ಯನಿರ್ವಹಿಸಿ 2008ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರದ ದಿನಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಆರ್.ವಿ ದೇಶಪಾಂಡೆಯವರಿಗೆ ಬೆಂಬಲ ನೀಡಿದ್ದರು. ದಾಂಡೇಲಿಯನ್ನು ತಾಲೂಕನ್ನಾಗಿಸಲು ಇವರ ಹೋರಾಟ ಪ್ರಮುಖವಾಗಿದ್ದು, ಹೋರಾಟಗಳಿಂದಲೇ ತಮ್ಮನ್ನು ಗುರುತಿಸಿಕೊಂಡು ಅಪಾರ ಅಭಿಮಾನಿಗಳನ್ನು ಗಳಿಸಿದ್ದರು.
Advertisement
ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಭೇಟಿ ನೀಡಿದ್ದಾರೆ. ಆರೋಪಿಯ ಹುಡುಕಾಟಕ್ಕೆ ಬಲೆ ಬೀಸಿದ್ದು, ಘಟನೆಗೆ ಪ್ರಮುಖ ಕಾರಣ ತಿಳಿದುಬಂದಿಲ್ಲ. ಘಟನೆಯನ್ನು ಸ್ಥಳೀಯ ಮುಖಂಡರು ಖಂಡಿಸಿದ್ದು, ದಾಂಡೇಲಿ ನಗರ ಬಂದ್ ಮಾಡುವ ಸಾಧ್ಯತೆಗಳಿವೆ.