Sunday, 22nd September 2019

ಸೆ.29ರಂದು ನಾಡಹಬ್ಬ ದಸರಾಕ್ಕೆ ಚಾಲನೆ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೊದಲ ದಸರಾ ಸಭೆ ನಡೆದಿದ್ದು, ದಸರಾ ಕಾರ್ಯಕಾರಿ ಸಮಿತಿ ಸಭೆ ನಂತರ ದಸರಾ ಮುಹೂರ್ತವನ್ನು ಘೋಷಣೆ ಮಾಡಿದ್ದಾರೆ.

ಸೆಪ್ಟೆಂಬರ್ 29ರಂದು ಬೆಳಗ್ಗೆ ಸುಮಾರು 9.30ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ಚಾಮುಂಡಿಬೆಟ್ಟದ ದೇವಾಲಯದ ಆವರಣದಲ್ಲಿ ಚಾಮುಂಡೇಶ್ವರಿ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡಲಾಗುತ್ತದೆ.

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪರಿಂದ ಈ ಬಾರಿಯ ದಸರಾ ಉದ್ಘಾಟನೆ ಮಾಡಿಸುತ್ತಿದ್ದು, ಅಂದು ಸಂಜೆ 7.30ಕ್ಕೆ ಅರಮನೆಯಲ್ಲಿ ಸಿಎಂ ಯಡಿಯೂರಪ್ಪ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮಾಡಿಸಲಾಗುತ್ತದೆ. ಅಕ್ಟೋಬರ್ 8ರಂದು 2.15ರಿಂದ 2.58ರ ಮಕರ ಲಗ್ನದಲ್ಲಿ ನಂದಿ ಪೂಜೆ ಮಾಡಲಾಗುತ್ತದೆ. ಅದೇ ದಿನ ಸಂಜೆ 4.31ರಿಂದ 4.57ರವರೆಗೆ ಕುಂಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ.

ಪ್ರತಿ ವರ್ಷ ಮಾಡುವಂತಹ ವ್ಯವಸ್ಥೆಯಲ್ಲೇ ಈ ಬಾರಿಯ ಉತ್ಸವ ಇರಬಾರದು. ವಿಭಿನ್ನವಾದ ಕಾರ್ಯಕ್ರಮಗಳನ್ನು ಅಳವಡಿಸಬೇಕು, ಸಾಮಾನ್ಯ ಜನರಿಗೆ ಯಾವುದೇ ತೊಂದರೆಯಾಗಬಾರದು ಎಂದು ಜಿಲ್ಲಾಧಿಕಾರಿಗಳು, ಪಾಲಿಕೆಯವರಿಗೆ ಸೂಚಿಸಲಾಗಿದೆ. ಶಾಸಕರು ಒಟ್ಟಾಗಿ ನಾಡಹಬ್ಬಕ್ಕೆ ಯಾವುದೇ ತೊಂದರೆ ಆಗದಂತೆ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ. ವಿಶ್ವಮಟ್ಟದಲ್ಲಿ ಖ್ಯಾತಿ ಪಡೆಯುವ ದಸರಾ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಪ್ರಮುಖವಾದ ಸ್ಥಳದಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಆದೇಶ ನೀಡಲಾಗಿದೆ ಎಂದು ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

Leave a Reply

Your email address will not be published. Required fields are marked *