Connect with us

Davanagere

ಬಿಜೆಪಿ ತೆಕ್ಕೆಗೆ ದಾವಣಗೆರೆ ಪಾಲಿಕೆ – ಕಾಂಗ್ರೆಸ್ ಆಕ್ರೋಶ

Published

on

ದಾವಣಗೆರೆ: ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಸದಸ್ಯ ಬಿ.ಜಿ.ಅಜಯ್ ಕುಮಾರ್ ಮೇಯರ್ ಆಗಿ ಹಾಗೂ ಸೌಮ್ಯ ನರೇಂದ್ರ ಕುಮಾರ್ ಉಪಮೇಯರ್ ಆಗಿ ಆಯ್ಕೆಯಾದರು. ಈ ಮೂಲಕ ಪಾಲಿಕೆ ಅಧಿಕಾರ ಬಿಜೆಪಿ ತೆಕ್ಕೆಗೆ ಜಾರಿತು.

ಗದ್ದಲದ ನಡುವೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್‍ನ ಮೇಯರ್ ಹಾಗೂ ಉಪಮೇಯರ್ ಕೋಪಗೊಂಡರು. ಇತ್ತ ಕಾಂಗ್ರೆಸ್ ನಾಯಕರು ಮತದಾನ ಬಹಿಷ್ಕರಿಸಿದರು. ಅಲ್ಲದೆ ಜಿಲ್ಲಾ ಚುನಾವಣಾಧಿಕಾರಿ ವಿ.ಪಿ.ಇಕ್ಕೇರಿ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್‍ನ ಆರು ಜನ ವಿಧಾನ ಪರಿಷತ್ ಸದಸ್ಯರು, 19 ಕಾರ್ಪೊರೇಟರ್‍ಗಳು ಮತದಾನದಲ್ಲಿ ಭಾಗವಹಿಸಿದ್ದರು. ಕೈ ಸದಸ್ಯರಾದ ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್, ಯಶೋದಾ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿತ್ತು. ಇಕ್ಕೇರಿಯವರ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು ಚುನಾವಣಾ ಪಟ್ಟಿಯಲ್ಲಿ ಸ್ಥಳೀಯರಲ್ಲದ ಎಂಎಲ್‍ಸಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿ ಈ ಬಗ್ಗೆ ತನಿಖೆ ನಡೆಸಿದ್ದಾರೆ. ಚುನಾವಣೆಗೆ ಮಾತ್ರ ಸೇರಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾದರೂ ಮತದಾನಕ್ಕೆ ಅವಕಾಶ ಕೊಟ್ಟಿರುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿ, ಸಭಾತ್ಯಾಗ ಮಾಡಿದರು. ನಂತರ ಗದ್ದಲದ ನಡುವೆಯೇ ಚುನಾವಣೆ ನಡೆಯಿತು.

ಈ ಕುರಿತು ಶಾಮನೂರು ಶಿವಶಂಕರಪ್ಪ ಮಾತನಾಡಿ, ಕಾಂಗ್ರೆಸ್‍ನ ಮೂವರು ಸದಸ್ಯರನ್ನು ಬಿಜೆಪಿ ಹಣ ಕೊಟ್ಟು ಖರೀದಿಸಿದೆ. ಈ ಮೂಲಕ ವಾಮಮಾರ್ಗದಿಂದ ಅಧಿಕಾರಕ್ಕೇರಿದೆ. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.