ಬೆಂಗಳೂರು: ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೊಂದಲಗಳಿಗೆ ತೆರೆ ಬಿದಿದ್ದು, ಹಿರಿಯ ನಾಯಕ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಅವರ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ್ ಅವರನ್ನು ಕಾಂಗ್ರೆಸ್ ಕಣಕ್ಕಿಸಲು ಯಶಸ್ವಿಯಾಗಿದೆ.
ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡಲು ಮುಂದಾಗಿದ್ದರು ಕೂಡ ಅವರು ಲೋಕ ಕಣದಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರು. ಹೀಗಾಗಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ಮಲ್ಲಿಕಾರ್ಜುನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಮಾತುಕತೆ ಫಲಪ್ರದವಾಗಿದ್ದು ಮಲ್ಲಿಕಾರ್ಜುನ್ ಸ್ಪರ್ಧಿಸಲು ಒಪ್ಪಿಗೆ ನೀಡಿದ್ದಾರೆ.
ಮೈತ್ರಿ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಶಾಮನೂರು ಶಿವಶಂಕರಪ್ಪ ಅವರು, ಮಂತ್ರಿಸ್ಥಾನ ನೀಡದ್ದಕ್ಕೆ ನನಗೆ ಬೇಸರವಿದೆ. ಅದಕ್ಕಾಗಿ ನನಗೆ ಬಿ ಫಾರಂ ಬೇಡ ಎಂದು ಹೇಳಿದ್ದೇನೆ. ನಾನು ಯಾರ ಹೆಸರನ್ನು ಸೂಚಿಸಿಲ್ಲ ಹಾಗೂ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ್ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.
ಇತ್ತ ಶ್ಯಾಮನೂರು ಅವರು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಸಮಿತಿ ಎಸ್.ಎಸ್ ಮಲ್ಲಿಕಾರ್ಜುನ್ ಅವರಿಗೆ ತುರ್ತು ಬುಲಾವ್ ನೀಡಿತ್ತು. ಎಸ್.ಎಸ್.ಮಲ್ಲಿಕಾರ್ಜುನ್ ಈಗಾಗಲೇ ಮೂರು ಬಾರಿ ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸೋಲು ಕಂಡಿದ್ದಾರೆ. ಹೀಗಾಗಿ ಅವರು ಈ ಬಾರಿ ಬಿಜೆಪಿ ಎದುರು ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿಯೂ ಲಭಿಸಿತ್ತು. ಅಷ್ಟೇ ಅಲ್ಲದೇ ಮಾಜಿ ಮುಖ್ಯಮಂತ್ರಿ ಜೆ.ಹೆಚ್ ಪಾಟೀಲ್ ರ ಮಗ ತೇಜಸ್ವಿ ಪಾಟೀಲ್ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ ಮಂಜಪ್ಪನ ಹೆಸರು ಕೂಡ ಟಿಕೆಟ್ ರೇಸ್ ನಲ್ಲಿ ಕೇಳಿ ಬಂದಿತ್ತು.