ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರೆಸಾರ್ಟ್ ರಾಜಕೀಯವನ್ನು ವಿರೋಧಿಸಿ ವೃದ್ಧರೊಬ್ಬರು ಮೈಕ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ದಾವಣಗೆರೆಯ ಅಶೋಕ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದ ಮಂಜುನಾಥಯ್ಯ, ರಾಜಕಾರಣಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮಳೆಯಿಲ್ಲದೆ ರೈತರು ಪರದಾಡುವಂತಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ರಾಜ್ಯದಲ್ಲಿ ಈ ರೀತಿಯ ಪರಿಸ್ಥಿತಿ ಇರುವಾಗ ಹಣ ಹಾಗೂ ಅಧಿಕಾರಕ್ಕಾಗಿ ರಾಜ್ಯದ ಶಾಸಕರ ಐಶಾರಾಮಿ ಹೋಟೆಲ್, ರೆಸಾರ್ಟಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಕೂಡಲೇ ರಾಜ್ಯದ ಜನತೆ ಈ ರೀತಿಯ ಕೀಳು ಮಟ್ಟದ ರಾಜಕಾರಣಿಗಳ ವಿರುದ್ಧ ಹೋರಾಟ ನಡೆಸಬೇಕು. ಮತ್ತೊಮ್ಮೆ ಚುನಾವಣೆಯಲ್ಲಿ ಮತಯಾಚನೆಗೆ ಬಂದರೆ ತಕ್ಕ ಶಾಸ್ತಿ ಮಾಡಿ ಎಂದು ಏಕಾಂಗಿಯಾಗಿ ಪ್ರತಿಭಟನೆ ನಡೆಸುವ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದರು.