ದಾವೋಸ್‍ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆ ಉದ್ಘಾಟನೆ- ಮೊದಲ ದಿನದಲ್ಲೇ ಭರ್ಜರಿ ಹೂಡಿಕೆ ಮಾತುಕತೆಗೆ ಸಿಎಂ ಚಾಲನೆ

Public TV
2 Min Read
bsy davos 1

ದಾಮೋಸ್: ಸ್ವಿಟ್ಜರ್ಲೆಂಡ್‍ನ ದಾವೋಸ್‍ನಲ್ಲಿ ಇಂದಿನಿಂದ 4 ದಿನಗಳ ವಿಶ್ವ ಆರ್ಥಿಕ ಶೃಂಗ ಸಭೆಗೆ ಚಾಲನೆ ಕೊಡಲಾಯ್ತು. ಕರ್ನಾಟಕದಿಂದ ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ಮೊದಲ ದಿನದಿಂದಲೇ ಜಾಗತಿಕ ಮಟ್ಟದ ಉದ್ಯಮಿಗಳ ಜೊತೆ ಯಶಸ್ವಿಯಾಗಿ ಹೂಡಿಕೆ ಕುರಿತು ಮಾತುಕತೆ ಆರಂಭಿಸಿತು. ಕರ್ನಾಟಕದಲ್ಲಿ ಸೆಂಟರ್ ಫಾರ್ ಇಂಟರ್ ನೆಟ್ ಆಫ್ ಎಥಿಕಲ್ ಥಿಂಗ್ಸ್ ಪ್ರಾರಂಭಿಸಲು ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ರಾಜ್ಯದಲ್ಲಿ ಹೂಡಿಕೆದಾರರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ರಾಜ್ಯದ ನಿಯೋಗ ಪ್ರಮುಖ ಹೆಜ್ಜೆಯಿಟ್ಟಿದೆ.

ದಾವೋಸ್‍ನಲ್ಲೇ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೂರಟ್ ಸಾನ್ಮೆಝ್ ಅವರು ಮಾತನಾಡುತ್ತ, ವ್ಯಾಪಾರ ವಹಿವಾಟಿನಲ್ಲಿ ನೈತಿಕತೆಯು ಕಡಿಮೆಯಾಗುತ್ತಿರುವ ಕುರಿತು ಹೂಡಿಕೆದಾರರು ಕಳವಳ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಗಳು ಸೆಂಟರ್ ಫಾರ್ ಇಂಟರ್ ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ ಎಂದು ವಿವರಿಸಿದರು. ಕರ್ನಾಟಕ ರಾಜ್ಯವು ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸುವುದಾದರೆ, ಈ ಕೇಂದ್ರವನ್ನು ಕೂಡಲೇ ಸ್ಥಾಪಿಸುವಂತೆ ಸಲಹೆ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಕೇಂದ್ರವನ್ನು ಸ್ಥಾಪಿಸುವ ಭರವಸೆ ನೀಡಿದರು.

bsy 8

ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರು ಸುಲಲಿತ ವಹಿವಾಟು ನಡೆಸಲು ಸರ್ಕಾರ ಹೂಡಿಕೆದಾರರಿಗೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಅಭಿವೃದ್ಧಿಯ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಲು ರಾಜ್ಯ ಸರ್ಕಾರ ಉತ್ಸುಕವಾಗಿದ್ದು, ಜಾಗತಿಕ ಮಟ್ಟದಲ್ಲಿ ಕರ್ನಾಟಕ ಮುಂಚೂಣಿಗೆ ಬರಲು ನೆರವಾಗುವ ಅಧ್ಯಯನಗಳನ್ನು ಕೈಗೊಳ್ಳಲು ಆಸಕ್ತಿ ವಹಿಸಿದೆ ಎಂದು ತಿಳಿಸಿದರು.

ಸುಸ್ಥಿರ ಕೈಗಾರಿಕೆಗಳನ್ನು ರೂಪಿಸುವ ಮೂಲಕ ಕರ್ನಾಟಕ ರಾಜ್ಯವು ವರ್ಲ್ಡ್ ಎಕನಾಮಿಕ್ ಫೋರಂ 2020ರ ಗುರಿ ಸಾಧನೆಗೆ ಸಕ್ರೀಯವಾಗಿ ಶ್ರಮಿಸಲಿದೆ. ಭಾರತದ ಪ್ರಮುಖ ಕೈಗಾರಿಕಾ ರಾಜ್ಯವಾಗಿ ಹೊರಹೊಮ್ಮುವ ಮೂಲಕ ಜಾಗತಿಕ ಮಟ್ಟದಲ್ಲಿಯೂ ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ರಾಜ್ಯ ಪ್ರಮುಖ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

BSY 5 1

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *