ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ನಡುವೆಯೇ 73ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಉಡುಪಿ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವರ್ಷಧಾರೆಯ ನಡುವೆಯೇ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿರಂಗ ಹಾರಿಸಿದರು.
ಕಳೆದ ಒಂದು ವಾರದಿಂದ ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಿದೆ. ನಾಲ್ಕು ದಿನ ಮಳೆಗಾಗಿಯೇ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು.
ಸೋಮವಾರದಿಂದ ಭಾರೀ ಮಳೆಯಾಗುತ್ತಿತ್ತು. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್, ಅಗ್ನಿಶಾಮಕ, ಗೃಹ ರಕ್ಷಕ, ವಿದ್ಯಾರ್ಥಿಗಳು ಕೆಸರುಮಯ ಮೈದಾನದಲ್ಲೇ ಪಥ ಸಂಚಲನ ಮಾಡಿದರು. ಡಿಸಿ ತೆರೆದ ವಾಹನದಲ್ಲಿ ಮಳೆಯಲ್ಲಿ ಒದ್ದೆಯಾಗುತ್ತಾ ಗೌರವ ವಂದನೆ ಸ್ವೀಕಾರ ಮಾಡಿದರು. ಜೀಪ್ ಮೈದಾನದ ಕೆಸರಿನಲ್ಲಿ ಅಲ್ಲಲ್ಲಿ ತಿಣುಕಾಡಬೇಕಾಯ್ತು.
ಕಳೆದ ಒಂದು ವಾರದಲ್ಲಿ ನಿರಂತರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವ ದಿನ ಮಳೆಯ ನಡುವೆ ಕೆಸರಿನಲ್ಲಿ ಹೆಜ್ಜೆ ಹಾಕಬೇಕಾಯಿತು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ವಿದ್ಯಾರ್ಥಿಗಳು ಸಿದ್ಧತೆ ಮಾಡಿಕೊಂಡಿದ್ದರು. ಜಿಲ್ಲಾಧಿಕಾರಿಗಳ ಭಾಷಣ ವೇಳೆ ಧಾರಾಕಾರ ಮಳೆಯಾಗಿದ್ದರಿಂದ ನೃತ್ಯ ಕಾರ್ಯಕ್ರಮವನ್ನು ರದ್ದು ಮಾಡಲಾಯಿತು. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಮುಂದುವರೆಯುವ ಸಾಧ್ಯತೆಯಿದೆ.