ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget 2024) ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ.7 ರಂದು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ
ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರತಿಭಟನೆ ಸ್ಥಳವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ (Protest) ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
Advertisement
Advertisement
ರಾಜ್ಯಕ್ಕೆ ಅನ್ಯಾಯವಾಗಿದೆ:
2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 47 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ. ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಆದ್ರೆ ಕಳೆದ 5 ವರ್ಷಗಳ ಬಜೆಟ್ ನೋಡಿದ್ರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
Advertisement
Advertisement
62 ಸಾವಿರ ಕೋಟಿ ಹಣ ಕಡಿಮೆಯಾಗಿದೆ:
2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40 ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64%ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ 5 ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನೂ ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಪ್ರಸ್ತಾಪವೇ ಇಲ್ಲ:
ನೀರಾವರಿ ಯೋಜನೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,200 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಅದನ್ನೂ ನೀಡಿಲ್ಲ. ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಸಹ ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ. ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಡಬಲ್ ಇಂಜಿನ್ ಸರ್ಕಾರದಲ್ಲೂ ರಾಜ್ಯಲ್ಲೆ ಲಾಭ ಆಗಿಲ್ಲ:
ಹಿಂದಿನ ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ 62 ಸಾವಿರ ಕೋಟಿ ನಷ್ಟವಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ವಿರೋಧ ಪಕ್ಷದ ಸಂಸದರಿಗೂ ಆಹ್ವಾನ ನೀಡಲಿದ್ದೇವೆ. ಈ ಸಮಯದಲ್ಲಿ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ. ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 136+2 ಒಟ್ಟು 138 ಶಾಸಕರು, ಎಲ್ಲಾ ಪರಿಷತ್ ಸದಸ್ಯರು ಫೆ.6ರಂದು ದೆಹಲಿಗೆ ತಲುಪಿ, ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ನಮ್ಮ ಧ್ವನಿಯನ್ನು ಕೇಂದ್ರ ಸರ್ಕಾರಕ್ಕೆ ಮುಟ್ಟಿಸಲು ಮುಂದಾಗಿದ್ದೇವೆ. ಫೆ.7ರಂದು ಬೆಳಗ್ಗೆ 10 ಗಂಟೆಗೆ ನಮಗೆ ಅನುಮತಿ ನೀಡುವ ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮೇಕೆದಾಟುಗೆ ಹೊಸ ಸಮಿತಿ ರಚಿಸಲು ತೀರ್ಮಾನ:
ಇದೇ ವೇಳೆ ಮೇಕೆದಾಟು ಯೋಜನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಮೇಕೆದಾಟು ವಿಚಾರವಾಗಿ ಕರ್ನಾಟಕಕ್ಕೆ ಹೊಸ ಆಯಾಮ ಶುರುವಾಗಿದೆ. ನಿನ್ನೆ ಸಭೆಯಲ್ಲಿ ಮತಗಳನ್ನು ಹಾಕಲಾಗಿದೆ. ತಾಂತ್ರಿಕ ಸಮಿತಿ ರಚನೆಗೆ ತೀರ್ಮಾನವಾಗಿದೆ. ನಮ್ಮ ನೀರು ನಮ್ಮ ಹಕ್ಕು. ಅದನ್ನು ಬಳಸಿಕೊಂಡು ಅವರ ಪಾಲಿನ ನೀರನ್ನು ಖಂಡಿತವಾಗಿಯೂ ನೀಡುತ್ತೇವೆ. ಈ ವಿಚಾರವಾಗಿ ನಾವು ಅವರಿಗೆ ಮನದಟ್ಟು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡ ಪರಿಸರ ಇಲಾಖೆ ಅನುಮತಿ ನೀಡಿ ಸಹಕಾರ ನೀಡಬೇಕಾಗುತ್ತದೆ. ಎಲ್ಲಾ ಸಂಸದರು ಒಟ್ಟಾಗಿ ಧ್ವನಿ ಎತ್ತಲಿ ಎಂದು ಮನವಿ ಮಾಡುತ್ತೇನೆ ಎಂದು ನುಡಿದಿದ್ದಾರೆ.