ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಪ್ರಚಾರ ಕಾರ್ಯಗಳನ್ನು ಆರಂಭಿಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಆಮ್ ಆದ್ಮಿ ಪಾರ್ಟಿ ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ಮಾಡುತ್ತಿವೆ.
ಈ ನಡುವೆ ಎಎಪಿ ಪ್ರಣಾಳಿಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಜನವರಿ 15ರಿಂದ 20ರೊಳಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಎಎಪಿ ನಾಯಕಿ ಅತೀಶಿ ನೇತೃತ್ವದಲ್ಲಿ ಮೂವರು ಸದಸ್ಯರ ಸಮ್ಮುಖದಲ್ಲಿ ಪ್ರಣಾಳಿಕೆ ಸಿದ್ಧಪಡಿಸಲು ಸಿದ್ಧತೆ ಮಾಡಿಕೊಂಡಿದೆ. ಅಷ್ಟೇ ಅಲ್ಲದೆ ಎಎಪಿ ಜೊತೆಗೂಡಿರುವ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕಿಶೋರ್ ಕೂಡ ಪ್ರಣಾಳಿಕೆ ತಯಾರಿಕೆಗೆ ಸಹಾಯ ಮಾಡಲಿದ್ದಾರೆ ಎನ್ನಲಾಗಿದೆ.
ಕಳೆದ ಅವಧಿಯಂತೆ ಈ ಬಾರಿಯೂ ಅತ್ಯಂತ ಚಿಕ್ಕ ಪ್ರಣಾಳಿಕೆ ಬಿಡುಗಡೆ ಮಾಡಲು ಎಎಪಿ ಪ್ಲಾನ್ ಮಾಡಿಕೊಂಡಿದೆ. ಅತ್ಯಂತ ಹೆಚ್ಚು ದತ್ತಾಂಶದಿಂದ ಈ ಪ್ರಣಾಳಿಕೆ ಕೂಡಿರಲಿದೆ ಎಂದು ಮೂಲಗಳು ಹೇಳಿದ್ದು, ಕಳೆದ ಐದು ವರ್ಷಗಳಲ್ಲಿ ಆರೋಗ್ಯ, ಶಿಕ್ಷಣ, ಸಾರಿಗೆ, ಸಂಪರ್ಕ, ಸ್ವಚ್ಛತೆ ಸೇರಿ ವಿವಿಧ ಆಯಾಮಗಳಲ್ಲಿ ದೆಹಲಿಯನ್ನು ಹೇಗೆ ಅಭಿವೃದ್ಧಿ ಪಡಿಸಲಾಗಿದೆ ಎನ್ನುವುದನ್ನು ವಿವರಿಸಲಾಗುತ್ತದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಮನೆ ಮನೆ ಪ್ರಚಾರ ಹಾಗೂ ಟೌನ್ ಹಾಲ್‍ಗಳಲ್ಲಿ ನಡೆಸುತ್ತಿರುವ ಸಭೆಗಳಲ್ಲಿ ಈ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಸುಳಿವು ನೀಡಿದ್ದಾರೆ. ಕಡಿಮೆ ಪುಟಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡುವುದರಿಂದ ಹೆಚ್ಚು ಜನರನ್ನು ಪರಿಣಾಮಕಾರಿಯಾಗಿ ತಲುಪಬಹುದು ಎನ್ನುವುದು ಎಎಪಿ ಪಕ್ಷದ ಲೆಕ್ಕಾಚಾರವಾಗಿದೆ.