ಬಾಗಲಕೋಟೆ: ತಮ್ಮ ಗ್ರಾಮಕ್ಕೆ ಸಮರ್ಪಕ ಸಾರಿಗೆ ಬಸ್ (Bus) ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಆರೋಪಿಸಿ ಯಡಹಳ್ಳಿ(Yadahalli) ಗ್ರಾಮದ ವಿದ್ಯಾರ್ಥಿಗಳು(Students) ಹಾಗೂ ಸ್ಥಳೀಯರು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ (Student) ನಡೆಸಿದರು.
ಯಡಹಳ್ಳಿ ಗ್ರಾಮದಿಂದ ಪ್ರತಿನಿತ್ಯ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುವ ನೂರಾರು ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಬಸ್‌ಗಳ ವ್ಯವಸ್ಥೆ ಇಲ್ಲದೆ ತೀವ್ರ ತೊಂದರೆಯಾಗುತ್ತಿದೆ. ಸಾರಿಗೆ ಬಸ್‌ಗಳ ಅಭಾವದಿಂದಾಗಿ ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಕ್ಕೆ ಹೆಚ್ಚುವರಿ ಬಸ್‌ಗಳನ್ನು ಓಡಿಸುವಂತೆ ಮತ್ತು ನಿಗದಿತ ಸಮಯಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರೋಸಿಹೋದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂತಿಮವಾಗಿ ರಸ್ತೆ ತಡೆ ಚಳವಳಿಗೆ ಮುಂದಾಗಿದ್ದಾರೆ. ಇದನ್ನೂ ಓದಿ: ರೈತರ ಹೊಟ್ಟೆ ಮೇಲೆ ಹೊಡೆದು ಟೌನ್‌ಶಿಪ್ ಮಾಡಬೇಡಿ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ
ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ದಿಢೀರನೆ ಹೆದ್ದಾರಿಗೆ ಇಳಿದು ವಾಹನ ಸಂಚಾರ ತಡೆದಿದ್ದರಿಂದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಪೂರ್ಣ ಸ್ತಬ್ಧಗೊಂಡಿತು. ಸಾಲು ಸಾಲಾಗಿ ನಿಂತ ವಾಹನಗಳಿಂದಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ, ಬಿಸಿಲಿನಲ್ಲಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡುವಂತಾಯಿತು.
ಸ್ಥಳಕ್ಕೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ, ತಕ್ಷಣವೇ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

