Sunday, 22nd July 2018

Recent News

ಆರುಷಿ ಕೊಲೆ ಮಾಡಿದವರು ಯಾರು: ದೇಶಾದ್ಯಂತ ಕೇಳೋ ಪ್ರಶ್ನೆಗೆ ಉತ್ತರ ಸಿಗುತ್ತಾ?

ನವದೆಹಲಿ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಆರುಷಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೋಷಕರಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿತ್ತು. ಆದರೆ ಈಗ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದ್ದು ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಎದ್ದಿದೆ.

ಏನಿದು ಪ್ರಕರಣ? 9 ವರ್ಷಗಳ ಹಿಂದೆ ಉತ್ತರ ಪ್ರದೇಶದ ನೊಯಿಡಾದಲ್ಲಿ ಆರಿಷಿ ಕೊಲೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿದಂತೆ ಮೃತ ಯುವತಿಯ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅವರು ಈ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರು ಬಂಧಿಸಿದ್ದರು. ಅಲ್ಲದೇ ವಿಚಾರಣೆ ನಡೆಸಿದ್ದ ಸಿಬಿಐ ನ್ಯಾಯಾಲಯ ಪೋಷಕರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.

ಆದರೆ ಈ ಕುರಿತು ಮೇಲ್ಮನವಿ ಸಲ್ಲಿಸಿದ್ದ ತಲ್ವಾರ್ ದಂಪತಿಯನ್ನು ಗುರುವಾರ ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿದೆ. ಅಲ್ಲದೇ ಸಿಬಿಐ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ರದ್ದುಗೊಳಿಸಿ, ಗಾಜಿಯಾಬಾದ್‍ನ ದಾಸ್ನಾ ಕಾರಾಗೃಹದಲ್ಲಿರುವ ತಲ್ವಾರ್ ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಕೇವಲ ಅನುಮಾನದ ಆಧಾರದಲ್ಲಿ ಅಪರಾಧಿಗಳು ಎಂದು ಘೋಷಿಸಲು ಸಾಧ್ಯವಿಲ್ಲ. ಮೃತ ಆರುಷಿ ಪೋಷಕರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲ, ಲಭ್ಯವಿರುವ ಸಾಕ್ಷ್ಯಗಳು ಆರೋಪವನ್ನು ಸಾಬೀತು ಮಾಡುವಲ್ಲಿ ವಿಫಲವಾಗಿವೆ ಎಂದು ಅಭಿಪ್ರಾಯ ಪಟ್ಟಿತ್ತು.

ಪ್ರಸ್ತುತ ನ್ಯಾಯಾಲಯ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ಬುಲ್ಲಾ, ನನಗೆ ಆರುಷಿ ಕೊಲೆ ಮಾಡಿದ್ದ ಯಾರು ಎಂದು ತಿಳಿದಿಲ್ಲ, ಆದರೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಬಾಲಿವುಡ್ ನಟ ಕಬೀರ್ ಬೇಡಿ, ಮೃತ ಅರುಷಿ ಪೋಷಕರು ಬಿಡುಗಡೆಯಾಗಿದ್ದು, ನ್ಯಾಯ ದೊರೆತಿದೆ. ದುಸ್ವಪ್ನ ದೂರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪೋಷಕರು ತಮ್ಮ ಮಗಳನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಹಲವು ವರ್ಷಗಳು ಜೈಲುಶಿಕ್ಷೆಯನ್ನು ಅನುಭವಿಸಿದ್ದಾರೆ. ಆದರೆ ನಮಗೇ ಆಕೆಯನ್ನು ಕೊಲೆ ಮಾಡಿದ್ದು ಯಾರು ಎಂಬುವುದು ತಿಳಿದಿಲ್ಲ. ಎಲ್ಲಿದೆ ನ್ಯಾಯ? ಎಂದು ಕೀರ್ತನ ಕರ್ಮ ಎಂಬವರು ಟ್ವೀಟ್ ಮಾಡಿದ್ದಾರೆ.

ಹೈಕೋರ್ಟ್‍ನ ತೀರ್ಪಿನ ಅನ್ವಯ ಶುಕ್ರವಾರ ಪೊಲೀಸರು ಅರುಷಿ ಪೋಷಕರನ್ನು ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದರೆ ಸಿಬಿಐ ವಕೀಲರು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *