ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್(Fouzia Tarannum) ವಿರುದ್ಧ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್(N Ravikumar) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯಕ್ಕೆ ಖುದ್ದು ಹಾಜರಾದ ಎಂಎಲ್‌ಸಿ ರವಿಕುಮಾರ್ ಅವರಿಗೆ ಕೋರ್ಟ್ ಜಾಮೀನು (Bail) ಮಂಜೂರು ಮಾಡಿದ್ದು, ಭವಿಷ್ಯದಲ್ಲಿ ಯಾವುದೇ ರೀತಿಯ ದ್ವೇಷ ಭಾಷಣ ಅಥವಾ ಅವಹೇಳನಕಾರಿ ಟೀಕೆಗಳನ್ನು ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ 10 ಸಾವಿರ ರೂ. ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಗೈರುಹಾಜರಾಗಿದ್ದಕ್ಕೆ 500 ರೂ. ದಂಡ ವಿಧಿಸಿದೆ. ಯಾವುದೇ ಪ್ರಚೋದನಕಾರಿ ಅಥವಾ ದ್ವೇಷಪೂರಿತ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ಷರತ್ತು ವಿಧಿಸಿದೆ. ಇದನ್ನೂ ಓದಿ: ಬಿಜೆಪಿ ಪಾದಯಾತ್ರೆಗೂ ಮುನ್ನವೇ ರಾಜೀನಾಮೆಗೆ ಸಚಿವ ನಾಗೇಂದ್ರ ಒಲವು?
ಏನಿದು ಪ್ರಕರಣ?
2025ರ ಮೇ 24 ರಂದು ಕಲಬುರಗಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಮಾತನಾಡಿದ್ದ ರವಿಕುಮಾರ್, ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನಮ್ ಅವರು ಕಾಂಗ್ರೆಸ್ ಸರ್ಕಾರದ ಪ್ರಭಾವಕ್ಕೆ ಒಳಗಾಗಿದ್ದಾರೆ. ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಅಧಿಕಾರಿಯಾಗಿದ್ದಾರೋ ಗೊತ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎನ್. ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ವಿರೋಧ ವ್ಯಕ್ತವಾದ ಬಳಿಕ ಎನ್. ರವಿಕುಮಾರ್ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿ ಕ್ಷಮೆಯಾಚಿಸಿದ್ದರು.
