-ಮಂಗಳವಾರ ಹುಟ್ಟೂರು ವೇಣೂರಿನಲ್ಲಿ ಅಂತ್ಯಕ್ರಿಯೆ
ಮಂಗಳೂರು: ಮಾಜಿ ಕೇಂದ್ರ ಸಚಿವ ವಿ. ಧನಂಜಯ್ ಕುಮಾರ್ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಕಳೆದ ಆರು ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.
ಮಂಗಳವಾರ ಹುಟ್ಟೂರು ಮೂಡುಬಿದಿರೆಯ ವೇಣೂರಿನಲ್ಲಿ ಧನಂಜಯ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅಂತಿಮ ದರ್ಶನದ ಬಳಿಕ ವೇಣೂರಿನಲ್ಲಿ ಜೈನ ಧರ್ಮದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ.
Advertisement
Advertisement
ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರಿನವರು. ಧನಂಜಯ್ ಕುಮಾರ್ 1951ರ ಜುಲೈ 4ರಂದು ವೇಣೂರಿನಲ್ಲಿ ಜನಿಸಿದ್ದರು. ಇವರ ಪತ್ನಿಯ ಹೆಸರು ವನಿತಾ ಮತ್ತು ಇವರಿಗೆ ಇಬ್ಬರು ಮಕ್ಕಳು ಇದ್ದಾರೆ. ಬಿಜೆಪಿ ಯುವ ಮೋರ್ಚಾ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಧನಂಜಯ್ ಕುಮಾರ್, 1983ರಲ್ಲಿ ಶಾಸಕರಾಗಿ ರಾಜಕಾರಣದಲ್ಲಿ ಸಕ್ರಿಯರಾದರು.
Advertisement
Advertisement
ಬಳಿಕ 1991ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಕಾಂಗ್ರೆಸ್ಸಿನ ಪ್ರಭಾವಿ ಮುಖಂಡ ಜನಾರ್ದನ ಪೂಜಾರಿಯನ್ನು ಸೋಲಿಸಿದ್ದ ಧನಂಜಯ್ ಕುಮಾರ್ ಬಿಜೆಪಿಯಲ್ಲಿ ಪ್ರಭಾವ ಬೆಳೆಸಿಕೊಂಡಿದ್ದರು. ಆ ಬಳಿಕ ಮಂಗಳೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆಯಾಗಿ ಹೆಗ್ಗಳಿಕೆಯನ್ನು ಪಡೆದಿದ್ದರು.
ವಾಜಪೇಯಿ ಸರ್ಕಾರದಲ್ಲಿ ವಿಮಾನಯಾನ ಸಚಿವರಾಗಿದ್ದ ಧನಂಜಯ್ ಕುಮಾರ್, 1991ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ಇವರು ದಕ್ಷಿಣ ಕನ್ನಡ ಕ್ಷೇತ್ರವನ್ನು ಲೋಕಸಭೆಯಲ್ಲಿ 4 ಬಾರಿ ಪ್ರತಿನಿಧಿಸಿದ್ದು, 1996ರಿಂದ ಮೂರು ಬಾರಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರವರ ಪರಮಾಪ್ತರಾದ ಧನಂಜಯ್ ಅವರು ಕೆಜೆಪಿ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1996ರಲ್ಲಿ ಕೇಂದ್ರ ವಿಮಾನ ಯಾನ ಮತ್ತು ಪ್ರವಾಸೋದ್ಯಮ ಖಾತೆ ಸಚಿವರಾಗಿ, 1999-2000ನೇ ಸಾಲಿನಲ್ಲಿ ವಿತ್ತ ಖಾತೆ ರಾಜ್ಯ ಸಚಿವರಾಗಿ ಹಾಗೂ 2000-2003 ರಲ್ಲಿ ಜವಳಿ ಖಾತೆ ರಾಜ್ಯ ಸಚಿವರಾಗಿದ್ದರು.
ಅಲ್ಲದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ದೆಹಲಿ ವಿಶೇಷ ಪ್ರತಿನಿಧಿಯಾಗಿ ಕೆಲಸ ಮಾಡಿದ್ದರು. ಬಳಿಕ ಪಕ್ಷದಲ್ಲಿ ಭಿನ್ನಾಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಜೆಡಿಎಸ್ ಸೇರಿದ್ದ ಧನಂಜಯ್ ಕುಮಾರ್, ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv