Connect with us

Bengaluru City

12 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದು, ಎಚ್‍ಡಿಡಿ

Published

on

ಬೆಂಗಳೂರು: ಬರೋಬ್ಬರಿ 12 ವರ್ಷಗಳ ಬಳಿಕ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ನಗರದ ಅಶೋಕ ಹೋಟೆಲ್ ನಲ್ಲಿ ಉಪ ಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಜೆಡಿಎಸ್, ಕಾಂಗ್ರೆಸ್ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಇಬ್ಬರು ನಾಯಕರು ಕಾಣಿಸಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‍ಡಿಡಿ, ರಾಜ್ಯದಲ್ಲಿ ಎರಡು ಪಕ್ಷಗಳು ಜಂಟಿ ಸರ್ಕಾರ ರಚಿಸಿದ್ದೇವೆ. 12 ವರ್ಷದ ಮೇಲೆ ನಾನು ಮತ್ತು ಸಿದ್ದರಾಮಯ್ಯನವರು ಒಂದೇ ವೇದಿಕೆಯಲ್ಲಿ ಉಪಸ್ಥಿತರಿದ್ದೇವೆ. ಯಾವುದೇ ತಪ್ಪುಮಾಡಿದ್ದರು ಕ್ಷಮಿಸಿ ಎಂದು ರಾಜ್ಯದ ಜನರ ಮುಂದೆ ಹೋಗುತ್ತೇವೆ. ನಾನು ಸಿದ್ದರಾಮಯ್ಯ ಒಳ್ಳೆಯ ಸ್ನೇಹಿತರು. ಒಟ್ಟಿಗೆ ಪ್ರಚಾರ ಹೋಗಲು ಈ ಮೊದಲೇ ತೀರ್ಮಾನ ಮಾಡಿದ್ದೇವೆ. ಸದ್ಯ ನಡೆಯುತ್ತಿರುವ ಮೂರು ಲೋಕಸಭಾ ಹಾಗೂ 2 ವಿಧಾನಸಭಾ ಉಪ ಚುನಾವಣೆಯಲ್ಲಿ ಜಾತ್ಯಾತೀತ ಶಕ್ತಿಯನ್ನು ಎದುರಿಸಲು ಕರ್ನಾಟಕದಲ್ಲಿ ಒಟ್ಟಾಗಿ ಹೋಗುತ್ತೇವೆ. 5 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಒಟ್ಟಿಗೆ ಶಕ್ತಿ ಪ್ರದರ್ಶಿಸುತ್ತೇವೆ. ಯಾವುದೇ ಸನ್ನಿವೇಶದಲ್ಲಿ ಕಿಂಚಿತ್ತು ಅನುಮಾನಕ್ಕೆ ಎಡೆಮಾಡಿಕೊಡದೇ ಹೋರಾಟ ಮಾಡಿ ಉಪಚುನಾವಣೆ ಗೆಲ್ಲುತ್ತೇವೆ ಎಂದರು.

ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಒಟ್ಟಿಗೆ ಪ್ರಚಾರಕ್ಕೆ ಹೋಗುತ್ತೇವೆ. ಎರಡು ಪಕ್ಷದ ನಾಯಕರು ಒಟ್ಟಿಗೆ ಪ್ರಚಾರ ಮಾಡುತ್ತಾರೆ. ವೈಯಕ್ತಿಕ ಪ್ರತಿಷ್ಠೆ ಬಿಟ್ಟು ರಾಜ್ಯ ಒಳಿತಿಗಾಗಿ ಕಾರ್ಯನಿರ್ವಹಿಸಬೇಕು. ಒಂದು ಕಾಲದಲ್ಲಿ ಎದುರಾಳಿಗಳಾಗಿ ಇದ್ದವರೇ ನಾವು ಒಂದಾಗಿದ್ದೇವೆ. ಆ ಮೂಲಕ ಜಾತ್ಯಾತೀತ ವ್ಯವಸ್ಥೆಯನ್ನು ಪ್ರಬಲಗೊಳಿಸುತ್ತೇವೆ. ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿ ಸ್ವಲ್ಪ ಬೇಸರವಿದೆ. ಆದರೆ ಅವರನ್ನು ನಾವು ಮನವೊಲಿಸಿದ್ದೇವೆ. ಹಳ್ಳಿಗಳಲ್ಲಿ ಎರಡು ಗುಂಪಾಗಿ ಪಕ್ಷದ ಪರ ಹೋರಾಟ ಮಾಡಿದವರು. ಆದರೆ ದೇಶದ ದೃಷ್ಟಿಯಿಂದ ಅದೆಲ್ಲವನ್ನು ಮರೆತು ಒಟ್ಟಿಗೆ ಹೋಗಬೇಕು. ಈ ಮೂಲಕ ನಾವು ಒಂದು ದೃಢವಾದ ನಿಲುವನ್ನು ತೆಗೆದುಕೊಂಡಿದ್ದೇವೆ. ಈ ಮಹತ್ವದ ಕಾರ್ಯಕ್ಕೆ ಎಲ್ಲರು ಸಹಕರಿಸಬೇಕು. ರಾಜ್ಯದ ಜನರ ಕೂಡ ಸಹಕಾರ ನೀಡಿ ಸಮ್ಮಿಶ್ರ ಸರ್ಕಾರಕ್ಕೆ ಈ ಉಪ ಚುನಾವಣೆಯಲ್ಲಿ ಆಶೀರ್ವಾದ ಮಾಡಬೇಕು. ಕೈ ಮುಗಿದು ಕೇಳಿಕೊಳ್ಳುತ್ತೇವೆ, ಹಿಂದೆ ನಾವು ವಿರುದ್ಧವಾಗಿ ನಿಂತು ಸಾಕಷ್ಟು ಮಾತನಾಡಿದ್ದೇವೆ. ಅದು ಯಾವುದನ್ನು ಜನರು ಮನಸಿನಲ್ಲಿಟ್ಟುಕೊಳ್ಳಬಾರದು. ಕಾರ್ಯಕರ್ತರು ಒಂದಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೇವೇಗೌಡರು, ಕೇಂದ್ರ ಸರ್ಕಾರದಿಂದ ಹಲವು ಸಮಸ್ಯೆಗಳು ಹುಟ್ಟಿಕೊಂಡಿವೆ. ಇಡೀ ದೇಶದಲ್ಲಿ ರೈತರು ಸೇರಿದಂತೆ, ನಾನಾ ಸಮಸ್ಯೆ ಪ್ರಾರಂಭವಾಗಿವೆ. ಗುಜರಾತ್, ಕಾಶ್ಮೀರ, ಉತ್ತರ ಪ್ರದೇಶದಲ್ಲಿ ಸಮಸ್ಯೆಗಳು ಕಾಣುತ್ತಿವೆ. ಕಾಶ್ಮೀರದಲ್ಲಿ ನೆಮ್ಮದಿಯ ವಾತಾವರಣವಿಲ್ಲ. ನಾನು ಐದು ಬಾರಿ ಕಾಶ್ಮೀರಕ್ಕೆ ಭೇಟಿ ನೀಡಿದ್ದೆ. ಆದರೆ ನನ್ನ ಅವಧಿಯಲ್ಲಿ 13 ಪಕ್ಷಗಳ ಸರ್ಕಾರವಿದ್ದರೂ ಉತ್ತಮ ಆಡಳಿತ ನಡೆಸಿದ್ದೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಮಾತನಾಡಿ, ಕೋಮವಾದಿ ಪಕ್ಷವನ್ನು ಸೋಲಿಸಲು ನಾವು ಜೊತೆಯಾಗಿರುವುದು ಅನಿವಾರ್ಯ. 2019ರ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಮೈತ್ರಿ ನಡೆಸಿದ್ದೇವೆ. ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಅಂತ ಸರ್ಕಾರ ರಚಿಸಿದ್ದೇವೆ. ಅಂತೆಯೇ ಇಡೀ ದೇಶದಲ್ಲಿ ಜಾತ್ಯಾತೀತ ಶಕ್ತಿಗಳು ಒಟ್ಟಾಗಬೇಕು ಎಂದು ದೇವೇಗೌಡರು ಅವಿರತವಾಗಿ ಪ್ರಯತ್ನ ಪಡುತ್ತಿದ್ದಾರೆ. ಅದ್ದರಿಂದ ಈ ಚುನಾವಣೆಯಲ್ಲಿಯೂ ಒಂದಾಗಿ ಪ್ರಚಾರ ನಡೆಸುತ್ತೇವೆ. ರಾಮನಗರದಲ್ಲೂ ಪ್ರಚಾರ ನಡೆಸುತ್ತೇನೆ. ಅಕ್ಟೋಬರ್ 30 ರಂದು ಶಿವಮೊಗ್ಗದಲ್ಲಿ ಬೃಹತ್ ಜಂಟಿ ಸಭೆ ಮಾಡುತ್ತೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಎರಡು ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Click to comment

Leave a Reply

Your email address will not be published. Required fields are marked *