ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲು ಮಹಾಯುತಿ ಮೈತ್ರಿಕೂಟದ ಮೂವರು ಉನ್ನತ ನಾಯಕರು ನಾಳೆ ದೆಹಲಿಯಲ್ಲಿ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.
ಬಿಜೆಪಿಯ ದೇವೇಂದ್ರ ಫಡ್ನವೀಸ್, ಎನ್‌ಸಿಪಿಯ ಅಜಿತ್ ಪವಾರ್ ಮತ್ತು ಶಿವಸೇನೆಯ ಏಕನಾಥ್ ಶಿಂಧೆ ಸಿಎಂ ರೇಸ್‌ನಲ್ಲಿದ್ದಾರೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಐತಿಹಾಸಿಕ ಸಾಧನೆಯಲ್ಲಿ ಮಹಾಯುತಿ ಮೈತ್ರಿಕೂಟವು 288 ವಿಧಾನಸಭಾ ಸ್ಥಾನಗಳ ಪೈಕಿ 235ರಲ್ಲಿ ಗೆದ್ದುಕೊಂಡಿದೆ. ಬಿಜೆಪಿ ಮಾತ್ರ 132 ಸ್ಥಾನಗಳನ್ನು ಗೆದ್ದಿದೆ. ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿವೆ.
ಮೂವರು ನಾಯಕರ ಬೆಂಬಲಿಗರು ಮಹಾರಾಷ್ಟ್ರದ ಸಿಎಂ ಸ್ಥಾನಕ್ಕೆ ತಮ್ಮ ನಾಯಕರನ್ನು ಪರಿಪೂರ್ಣ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಮಿತ್ರಪಕ್ಷವಾದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಅಠವಳೆ) ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು, ಮುಂದಿನ ಮುಖ್ಯಮಂತ್ರಿಯಾಗಿ ರಾಜ್ಯ ಮೈತ್ರಿಕೂಟದ ನೇತೃತ್ವ ವಹಿಸಲು ಫಡ್ನವಿಸ್ ಅವರನ್ನು ಬೆಂಬಲಿಸಿದ್ದಾರೆ. ಅಠವಳೆ ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವುದನ್ನು ಉಲ್ಲೇಖಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ದೇವೇಂದ್ರ ಫಡ್ನವಿಸ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಅಂತಿಮಗೊಳಿಸಿದೆ ಎಂದಾಗ, ಏಕನಾಥ್ ಶಿಂಧೆ ಸ್ವಲ್ಪ ಅಸಮಾಧಾನಗೊಂಡಿದ್ದರು. ಇದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ಬಿಜೆಪಿ 132 ಸ್ಥಾನಗಳನ್ನು ಗೆದ್ದಿದೆ. ಆದ್ದರಿಂದ ಅವರು ದಾರಿ ಮಾಡಿಕೊಡಬೇಕು. ಶಿಂಧೆ ಕೇಂದ್ರ ಸಚಿವರನ್ನಾಗಿ ಮಾಡಬೇಕು ಎಂದು ಅಠವಳೆ ಅಭಿಪ್ರಾಯಪಟ್ಟಿದ್ದಾರೆ.