ಮಂಗಳೂರು: ಬೇಸಿಗೆಯ ಬಿಸಿಲಿನ ತೀವ್ರತೆಯಿಂದಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಕ್ಷೇತ್ರಕ್ಕೆ ಬರುವವರು ಕೆಲವು ದಿನ ಬಿಟ್ಟು ಬರಲು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಬೇಸಿಗೆಯ ತೀವ್ರತೆಗೆ ದೇಶಾದ್ಯಂತ ನೀರಿನ ಅಭಾವವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನೀರಿಗಾಗಿ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟವಾದಂತೆ ರೇಶನ್ ಮುಖಾಂತರ ನೀರನ್ನು ಜಿಲ್ಲಾಡಳಿತವು ವಿತರಣೆ ಮಾಡುತ್ತಿದ್ದು, ವಾರಕ್ಕೆ 2 ಅಥವಾ 3 ದಿನ ಮಾತ್ರ ಜನರಿಗೆ ನೀರು ದೊರಕುತ್ತಿದೆ.
Advertisement
Advertisement
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೂಡಾ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ರೀತಿಯಲ್ಲಿ ಕಡಿಮೆಯಾಗುತ್ತಿದೆ. ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಪ್ರಕಟಣೆಯಲ್ಲಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ.