ಉಸಿರಾಟದ ಸಮಸ್ಯೆಯಿಂದ ದಾಖಲಾಗಿದ್ದ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಡಾ. ಪ್ರೊ.ಪ್ರತೀತ್ ಸಮ್ದಾನಿ ಮಾತನಾಡಿ, ಧರ್ಮೇಂದ್ರ (Dharmendra) ಅವರನ್ನು ಬೆಳಗ್ಗೆ 7:30 ರ ಸುಮಾರಿಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಕುಟುಂಬವು ಅವರಿಗೆ ಮನೆಯಲ್ಲೇ ಚಿಕಿತ್ಸೆ ಕೊಡಿಸಲು ನಿರ್ಧರಿಸಿದೆ. ಹೀಗಾಗಿ, ಅವರಿಗೆ ಮನೆಯಲ್ಲೇ ಚಿಕಿತ್ಸೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ
ಧರ್ಮೇಂದ್ರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಾರೆ. ಈ ಸಮಯದಲ್ಲಿ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಅವರ ಮತ್ತು ಕುಟುಂಬದ ಗೌಪ್ಯತೆಯನ್ನು ಗೌರವಿಸುವಂತೆ ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ಅವರ ಚೇತರಿಕೆ, ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಎಲ್ಲರ ಪ್ರೀತಿ, ಪ್ರಾರ್ಥನೆಗಳು ಮತ್ತು ಶುಭ ಹಾರೈಕೆಗಳಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಧರ್ಮೇಂದ್ರ ಅವರ ಕುಟುಂಬ ತಿಳಿಸಿದೆ.
ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಪತ್ನಿ ಹೇಮಾ ಮಾಲಿನಿ, ಸನ್ನಿ ಡಿಯೋಲ್, ಬಾಬಿ ಡಿಯೋಲ್, ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಆರ್ಯನ್ ಖಾನ್, ಗೋವಿಂದ, ಅಮೀಷಾ ಪಟೇಲ್ ಮತ್ತು ಆಮಿರ್ ಖಾನ್ ಸೇರಿದಂತೆ ಸೆಲಿಬ್ರಿಟಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಿವುಡ್ ನಟ ಧರ್ಮೇಂದ್ರ


