ಹುಬ್ಬಳ್ಳಿ: 35 ವರ್ಷಗಳ ರಾಜಕೀಯ ಜೀವನದಲ್ಲಿ ಹೊರಟ್ಟಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸವಾಲು ಹಾಕಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರವಯುತ ಸ್ಥಾನದಲ್ಲಿರುವ ಹೊರಟ್ಟಿ ತಮ್ಮ ಘನತೆಗೆ ತಕ್ಕ ಹಾಗೇ ನಾಲಿಗೆ ಮೇಲೆ ಹಿಡಿತ ಇರಬೇಕು. ಪದೇ ಪದೇ ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಅವರು ಯಾಕೆ ನಮ್ಮ ತೇಜೋವಧೆ ಮಾಡುತ್ತಾರೆ ಎಂಬುದನ್ನು ಬಹಿರಂಗ ಪಡಿಸಲಿ. ಇದಕ್ಕೂ ಮುನ್ನ ಅವರ 35 ವರ್ಷದ ರಾಜಕೀಯ ಜೀವನದಲ್ಲಿ ಈ ಭಾಗಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಸವಾಲು ಹಾಕಿದರು.
Advertisement
Advertisement
ಇದೇ ವೇಳೆ ಲಿಂಗಾಯತ ಧರ್ಮವನ್ನು ಒಡೆಯಲು ಒಂದ ರಾಜಕಾರಣಿಗಳು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಯಾಕೆ ಒಂದಾಗುತ್ತಿಲ್ಲ ಎಂದು ಪ್ರಶ್ನಿಸಿದ ಅವರು ಆಡಳಿತರೂಢ ಸರ್ಕಾರದ ಮಲತಾಯಿ ಧೋರಣೆಯೇ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಕಾರಣ. ಈ ಕೂಗು ನನ್ನದೊಬ್ಬನದ್ದಲ್ಲ, ಈ ಭಾಗದ ಜನರ ಕೂಗು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ನನ್ನ ಬೆಂಬಲವೂ ಇದೆ ಎಂದು ಸ್ಪಷ್ಟಪಡಿಸಿದರು.
Advertisement
ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಭಾನುವಾರ ಮಾತನಾಡಿದ್ದ ಬಸವರಾಜ್ ಹೊರಟ್ಟಿ ಅವರು, ದಿಂಗಾಲೇಶ್ವರ ಸ್ವಾಮೀಜಿಗೆ ಮಾಡಲು ಕೆಲಸವಿಲ್ಲ. ಅದಕ್ಕಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರದಲ್ಲಿ ಮೂಗು ತೋರಿಸುತ್ತಿದ್ದಾರೆ. ಇನ್ನು ಕೆಲವು ಸ್ವಾಮೀಜಿಗಳು ಅವರ ಹಾಗೆಯೇ ಮಾಡುತ್ತಿದ್ದಾರೆ. ಸ್ವಾಮೀಜಿಗಳಿಗೆ ಏಕೆ ರಾಜಕೀಯ ಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಸಂಪೂರ್ಣ ನನ್ನ ವಿರೋಧವಿದೆ. ಅಖಂಡ ಕರ್ನಾಟಕ ನಿರ್ಮಾಣಕ್ಕೆ ಅನೇಕ ನಾಯಕರು, ಹೋರಾಟಗಾರರು ಶ್ರಮಿಸಿದ್ದಾರೆ. ಈಗ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ ಎಂದು ಹೇಳಿದ್ದರು.