Thursday, 12th December 2019

ಅನರ್ಹಗೊಂಡ ಕೈ ಶಾಸಕರ ತಿಥಿ ಮಾಡಿದ ಕಾರ್ಯಕರ್ತರು

ಹಾಸನ: ಭಾನುವಾರ ಸ್ಪೀಕರ್ ರಮೇಶ್ ಕುಮಾರ್ ಅವರು 14 ಮಂದಿ ಕೈ ಶಾಸಕರನ್ನು ಅನರ್ಹಗೊಳಿಸಿರುವ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಅವರ ತಿಥಿ ಕಾರ್ಯ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ನಮ್ಮ ಪಕ್ಷಕ್ಕೆ ದ್ರೋಹ ಎಸಗಿ ಹೋದವರು ನಮ್ಮ ಪಾಲಿಗೆ ಸತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ತಿಥಿ ವಡೆ, ಹಾರ ಪ್ರದರ್ಶಿಸಿ ಹಾಸನದ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರು ಅನರ್ಹಗೊಂಡ ಶಾಸಕರ ತಿಥಿ ಕಾರ್ಯ ಮಾಡಿದರು. ಅಲ್ಲದೆ ಅನರ್ಹಗೊಂಡ ಶಾಸಕರನ್ನು ಮುಂದೆ ಪಕ್ಷಕ್ಕೆ ಸೇರಿಸದಂತೆ ಹೈಕಮಾಂಡಿಗೆ ಮನವಿ ಮಾಡಿ, ಸ್ಪೀಕರ್ ರಮೇಶ್ ಕುಮಾರ್ ಅವರ ಕ್ರಮಕ್ಕೆ ಹರ್ಷ ವ್ಯಕ್ತಪಡಿಸಿದರು.

ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಅವರನ್ನು ಅನರ್ಹಗೊಳಿಸಿ ಸ್ಪೀಕರ್ ತೀರ್ಪು ಪ್ರಕಟಿಸಿದ್ದಾರೆ.

ಈ ಹಿಂದೆ ಅನರ್ಹಗೊಂಡ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್. ಶಂಕರ್ ಬೈ ಎಲೆಕ್ಷನ್ ಗೆ ನಿಲ್ಲುವಂತಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಖಡಕ್ಕಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *