ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಕಬ್ಬು ಬೆಳೆಗಾರರು, ನಾಳೆ (ಅ. 31) ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಕರೆ ನೀಡಿರುವ ಬೆನ್ನಲ್ಲೇ ಬೆಳಗಾವಿ (Belagavi Farmer Protest) ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ರೈತರ ಹೆದ್ದಾರಿ ತಡೆ ಹೋರಾಟಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು, ಜಿಲ್ಲೆಯ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳು, ಪ್ರಮುಖ ರಸ್ತೆಗಳು ಹಾಗೂ ಟೋಲ್ ಪ್ಲಾಜಾಗಳಲ್ಲಿ ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿದೆ.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ನಿರ್ಬಂಧಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಕಬ್ಬು ಬೆಳೆಗಾರರ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿವೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸುತ್ತಿರುವ ರೈತರು, ನಾಳೆ ಬೆಳಗಾವಿ ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ, ಇದೀಗ ಜಿಲ್ಲಾಡಳಿತದ ಆದೇಶದಿಂದಾಗಿ ರೈತರ ಹೋರಾಟದ ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ಪ್ರಕಾರ, ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ಸೇರಿದಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಗುಂಪು ಪ್ರತಿಭಟನೆ ನಡೆಸುವಂತಿಲ್ಲ. ಹೆದ್ದಾರಿಗಳ ಸಂಚಾರಕ್ಕೆ ಅಡ್ಡಿಪಡಿಸುವುದು, ವಾಹನಗಳನ್ನು ತಡೆದು ನಿಲ್ಲಿಸುವುದು ಹಾಗೂ ರಸ್ತೆ ಬಂದ್ ಮಾಡುವುದಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.ಇದನ್ನೂ ಓದಿ: ಇತಿಹಾಸ ನಿರ್ಮಿಸಿದ ಮನೀಷಾ – ಕುಸ್ತಿ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ
ಜಿಲ್ಲೆಯಲ್ಲಿರುವ ಮೂರು ಟೋಲ್ ಪ್ಲಾಜಾಗಳಲ್ಲಿಯೂ ಪ್ರತಿಭಟನೆ ನಡೆಸಿ ಟೋಲ್ ಸಂಚಾರ ಸ್ಥಗಿತಗೊಳಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಟ್ರ್ಯಾಕ್ಟರ್ ಸೇರಿದಂತೆ ಯಾವುದೇ ವಾಹನಗಳನ್ನು ಅಡ್ಡಲಾಗಿ ನಿಲ್ಲಿಸಿ ಸಂಚಾರಕ್ಕೆ ತಡೆಯೊಡ್ಡುವುದಕ್ಕೂ ಅವಕಾಶ ನೀಡಿಲ್ಲ.
ಇದರ ಜೊತೆಗೆ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಸರ್ಕಾರಿ ಆಸ್ತಿಗಳಿಗೆ ಹಾನಿ ಮಾಡಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಆದೇಶದಲ್ಲಿ ಒಟ್ಟು ಎಂಟು ಷರತ್ತುಗಳನ್ನು ವಿಧಿಸಲಾಗಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೆ, ನಿಷೇಧಾಜ್ಞೆ ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಅಥವಾ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಲು ಮುಂದಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಒಟ್ಟಿನಲ್ಲಿ ಕಬ್ಬು ಬೆಳೆಗಾರರ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ನಾಳೆ ನಡೆಯಬೇಕಿದ್ದ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವುದು ರೈತ ಸಂಘಟನೆಗಳಿಗೆ ಹಿನ್ನಡೆಯಾಗಿ ಪರಿಣಮಿಸಿದೆ. ಜಿಲ್ಲಾಡಳಿತದ ಆದೇಶದ ಬೆನ್ನಲ್ಲೇ ರೈತ ಮುಖಂಡರು ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದ್ದಾರೆ, ಪ್ರತಿಭಟನೆಯ ಸ್ವರೂಪ ಬದಲಿಸಲಿದ್ದಾರೆಯೇ ಅಥವಾ ಮುಂದಿನ ಹೋರಾಟಕ್ಕೆ ಹೊಸ ರೂಪುರೇಷೆ ಸಿದ್ಧಪಡಿಸಲಿದ್ದಾರೆಯೇ ಎಂಬುದು ಕಾದು ನೋಡಬೇಕಿದೆ.ಇದನ್ನೂ ಓದಿ: ಮೃತದೇಹಗಳನ್ನ ಕರ್ನಾಟಕಕ್ಕೆ ತರಲು ಉತ್ತರಾಖಂಡ ಅಧಿಕಾರಿಗಳೊಂದಿಗೆ ಮಾತುಕತೆ – ಸಿಎಂ ಡಿಕೆಶಿ
