– ಬೆಂಗಳೂರು, ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
– ಕನಕಪುರದಲ್ಲಿ 2 ಬಸ್ಸುಗಳಿಗೆ ಕಲ್ಲು
ರಾಮನಗರ: ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದನ್ನು ಖಂಡಿಸಿ, ರಾಮನಗರ, ಕನಕಪುರ ಹಾಗೂ ಬಳ್ಳಾರಿಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ಆರಂಭಿಸಿದ್ದಾರೆ.
ಇಂದು ರಾತ್ರಿಯೇ ಬೆಂಗಳೂರು, ಮೈಸೂರು ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಬುಧವಾರ ರಾಮನಗರ, ಕನಕಪುರ ಬಂದ್ ಬಾಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
Advertisement
Advertisement
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೂರಾರು ಕಾರ್ಯಕರ್ತರು ಅಭಿಮಾನಿಗಳು ಪ್ರತಿಭಟಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
Advertisement
ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬುಧವಾರ ರಾಮನಗರ, ಕನಕಪುರ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಲು ಅಭಿಮಾನಿಗಳು ನಿರ್ಧರಿಸಿದ್ದು, ರಾಮನಗರ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ರಾಮನಗರ ಕನಕಪುರದ ಚನ್ನಬಸಪ್ಪ ಸರ್ಕಲ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಟೈರ್ ಗೆ ಬೆಂಕಿ ಹಚ್ಚಿ ಹೆದ್ದಾರಿ ತಡೆದು ಡಿಕೆಶಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದ ಐಜೂರು ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ತೀವ್ರ ಪ್ರತಿಭಟನೆ ಹಿನ್ನೆಲೆ ಕನಕಪುರಕ್ಕೆ ರಾಮನಗರ ಎಸ್‍ಪಿ ಭೇಟಿ ನೀಡಿದ್ದು, ಕನಕಪುರ ತಾಲೂಕಿನದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇತ್ತ ಬಳ್ಳಾರಿಯಲ್ಲಿ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ.
ಮದ್ಯ ಮಾರಾಟ ಬಂದ್:
ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಮನಗರದಲ್ಲಿ ಮೂರು ದಿನ ಮದ್ಯ ಮಾರಾಟ ಬಂದ್ ಮಾಡಿ ಅಧಿಕಾರುಗಳು ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ ರೆಸ್ಟೋರೆಂಟ್ ಗಳನ್ನು ಕೂಡ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.