– ತಮಿಳುನಾಡು ಜೊತೆಗೆ ಸಮಾಲೋಚನೆ ನಡೆಸದೇ, ಅಭಿಪ್ರಾಯ ಸಂಗ್ರಹಿಸದೇ ಯೋಜನೆ ಸಾಧ್ಯವಿಲ್ಲ
ನವದೆಹಲಿ: ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಮತ್ತು ತಮಿಳುನಾಡು ಕಾಂಗ್ರೆಸ್ (Tamil Nadu Congress) ನಾಯಕರ ನಡುವೆ ನೇರ ಸಂಘರ್ಷ ಆರಂಭವಾಗಿದೆ. ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಅನುಮತಿ ಕೋರುತ್ತಿದ್ದರೆ, ತಮಿಳುನಾಡು ಕಾಂಗ್ರೆಸ್ ನಾಯಕ ಮಾಣಿಕ್ಕಂ ಠಾಗೋರ್ (Manickam Tagore) ಇದೇ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಎರಡು ರಾಜ್ಯಗಳ ಕಾಂಗ್ರೆಸ್ ನಾಯಕರ ಪರಸ್ಪರ ವಿರುದ್ಧದ ನಿಲುವು ಪಕ್ಷದೊಳಗಿನ ಭಿನ್ನಾಭಿಪ್ರಾಯವನ್ನ ಬಹಿರಂಗಪಡಿಸಿದೆ.
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ (Mekedatu Project) ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಶುಕ್ರವಾರ ಮೈಸೂರಿನಲ್ಲಿ ಮನವಿ ಮಾಡಿದ್ದರು. ಯೋಜನೆಗೆ ಅಡ್ಡಿಯಾಗಿರುವ ಅನುಮತಿಗಳನ್ನ ಶೀಘ್ರ ನೀಡುವಂತೆ ಒತ್ತಾಯಿಸಿದ್ದರು.

ಡಿ.ಕೆ ಶಿವಕುಮಾರ್ ಅವರ ಈ ನಿಲುವಿಗೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಕಂ ಠಾಗೋರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಶಿವಕುಮಾರ್ ಅವರ ಹೇಳಿಕೆ ಖಂಡನೀಯ ಎಂದು ಟೀಕಿಸಿರುವ ಅವರು, ಕಾವೇರಿ ನ್ಯಾಯಮಂಡಳಿ ಹಾಗೂ ಸುಪ್ರೀಂ ಕೋರ್ಟ್ ಆದೇಶಗಳ ಹಿನ್ನೆಲೆಯಲ್ಲಿ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯೋಜನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಕೂಡ ಮೇಕೆದಾಟು ವಿಚಾರದಲ್ಲಿ ತಮ್ಮ ರಾಜ್ಯ ಸರ್ಕಾರ ಸಕ್ರಿಯವಾಗಿ ಪ್ರತಿಕ್ರಿಯಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರಿಗೆ ಪತ್ರ ಬರೆದು, ಕಾವೇರಿ ವಿಚಾರದಲ್ಲಿ ಎಲ್ಲ ಪಕ್ಷಗಳ ಸಭೆ ಕರೆದು ಒಗ್ಗಟ್ಟಿನ ನಿಲುವು ರೂಪಿಸುವಂತೆ ಆಗ್ರಹಿಸಿದ್ದಾರೆ.
