ಅಂಗವಿಕಲರ ಪ್ರಮಾಣ ಪತ್ರ ವಿತರಣೆ ವಿಳಂಬ ಸಲ್ಲದು: ಕೆ.ಬಿ ಶಿವಕುಮಾರ್

Public TV
2 Min Read
SMG DC

ಶಿವಮೊಗ್ಗ: ಜಿಲ್ಲೆಯಲ್ಲಿ ಅಂಗವಿಕಲರ ಪ್ರಮಾಣ ಪತ್ರ ವಿತರಣೆಯನ್ನು ತ್ವರಿತಗೊಳಿಸಿ ನಿಗದಿತ ಅವಧಿಯ ಒಳಗಾಗಿ ಅರ್ಹರಿಗೆ ಪ್ರಮಾಣ ಪತ್ರ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ವಿಕಲಚೇತನರ ಕುಂದುಕೊರತೆಗಳ ನಿವಾರಣಾ ಸಭೆಯಲ್ಲಿ ಮಾತನಾಡಿದ ಡಿಸಿ, ಅಂಗವಿಕಲರು ಯುಡಿಡಿಐ ಪ್ರಮಾಣ ಪತ್ರ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಜಿಲ್ಲೆಯಲ್ಲಿ 11 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು, 964 ಕಾರ್ಡ್‍ಗಳನ್ನು ಸಿದ್ಧಪಡಿಸಲಾಗಿದೆ. ಪ್ರಸ್ತುತ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸಹ ಕಾರ್ಡ್ ಸಿದ್ಧಪಡಿಸಲು ಅವಕಾಶ ಕಲ್ಪಿಸಲಾಗಿದ್ದು, ಕಾರ್ಡ್ ವಿತರಣೆಯನ್ನು ತ್ವರಿತಗೊಳಿಸಬೇಕು. ಪರಿಶೀಲನೆಗೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ನಿಗದಿತ ಸಮಯದ ಒಳಗಾಗಿ ವಿಲೇವಾರಿ ಮಾಡಬೇಕು. ಪ್ರತಿ ವಾರ ಈ ಕುರಿತಾಗಿ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದು ಡಿ.ಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

SMG DC 2

ಪ್ರಸ್ತುತ ಜಿಲ್ಲಾ ಮಟ್ಟದ ಆಸ್ಪತ್ರೆಯಲ್ಲಿ ಮಾತ್ರ ಶ್ರವಣ ದೋಷ ಇರುವವರಿಗೆ ಆಡಿಯೊ ಮೆಟ್ರಿಕ್ ಇವಾಲ್ಯುವೇಶನ್ ಮಾಡಲು ತಜ್ಞರು ಲಭ್ಯರಿದ್ದು, ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಈ ಸೌಲಭ್ಯ ಕಲ್ಪಿಸಬೇಕು. ವಾರಕ್ಕೆ ಒಮ್ಮೆಯಾದರೂ ಈ ಸೌಲಭ್ಯ ತಾಲೂಕು ಆಸ್ಪತ್ರೆಗಳಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು. ಇದೇ ರೀತಿ ಬೇರೆ ಬೇರೆ ರೀತಿಯ ಅಂಗವಿಕಲತೆ ಪರಿಶೀಲನೆಗೆ ತಜ್ಞರು ಕನಿಷ್ಟ ತಿಂಗಳಿಗೆ ಒಮ್ಮೆ ನಿಗದಿತ ದಿನಾಂಕದಂದು ಎಲ್ಲಾ ತಾಲೂಕು ಆಸ್ಪತ್ರೆಯಲ್ಲಿ ಲಭ್ಯವಿರಬೇಕು ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳು ಅಂಗವಿಕಲರಿಗಾಗಿ ಲಭ್ಯವಿರುವ ಶೇ. 5ರಷ್ಟು ಅನುದಾನವನ್ನು ಕೇವಲ ತ್ರಿಚಕ್ರ ವಾಹನ ಒದಗಿಸಲು ಮಾತ್ರ ಬಳಸಿಕೊಳ್ಳದೇ, ಎಲ್ಲಾ ರೀತಿಯ ಅಂಗವಿಕಲರಿಗೂ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಶೇ. 5ರಷ್ಟು ಅನುದಾನವನ್ನು ಯಾವ ರೀತಿಯಲ್ಲಿ ಬಳಸಿಕೊಂಡಿವೆ ಎಂಬ ಬಗ್ಗೆ ಮಾಹಿತಿಯನ್ನು ಪಡೆಯಬೇಕು. ವಿವಿಧ ವಸತಿ ಯೋಜನೆಯಡಿ ಅಂಗವಿಕಲರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.

ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ರ‍್ಯಾಂಪ್‌, ಗಾಲಿ ಕುರ್ಚಿ, ಅಂಗವಿಕಲ ಸ್ನೇಹಿ ಶೌಚಾಲಯ ಸೇರಿದಂತೆ ಯಾವ್ಯಾವ ಸೌಲಭ್ಯಗಳಿವೆ ಎಂಬ ಬಗ್ಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *