ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸೆಸ್ ಇಳಿಕೆ ಮಾಡಿದ್ದು ಮತ್ತೆ ಇಳಿಕೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದೆ. ಅಲ್ಲದೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಎಲ್ಲಾ ರಾಜ್ಯದವರು ಅಬಕಾರಿ ಸುಂಕವನ್ನು ಕಡಿಮೆಗೊಳಿಸುವಂತೆ ಕೇಳಿಕೊಂಡಿದ್ದರು. ಅರುಣ್ ಜೇಟ್ಲಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರು ಈಗಲಾದರೂ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಮೊದಲು ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಈಗಾಗಲೇ ರಾಜ್ಯದಲ್ಲಿ 2 ರೂಪಾಯಿ ಸೆಸ್ ಕಡಿಮೆ ಮಾಡಿದ್ದೇವೆ. ಹೀಗಾಗಿ ಮತ್ತೊಮ್ಮೆ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಮೇಲಿನ ವ್ಯಾಟ್ ಯಾವುದೇ ಕಾರಣಕ್ಕೂ ಕಡಿತಗೊಳಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ 2.50 ರೂ. ಇಳಿಕೆ
ತೈಲ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಹಣಕಾಸು ಇಲಾಖೆಯ ಜೊತೆ ಸಭೆ ನಡೆಸಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಸರ್ಕಾರಕ್ಕೆ 10,500 ಕೋಟಿ ರೂ. ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳು ವ್ಯಾಟ್ ತೆರಿಗೆಯನ್ನು ಕಡಿತಗೊಳಿಸಲಿ ಎಂದು ಸಲಹೆ ನೀಡಿದ್ದರು.
ಸಮ್ಮಿಶ್ರ ಸರ್ಕಾರ ರಚನೆ ಬಳಿಕ 40 ಸಾವಿರ ಕೋಟಿ ರೂ. ಮೊತ್ತದಷ್ಟು ರೈತರ ಸಾಲ ಮನ್ನಾ ಘೋಷಿಸಿದ್ದ ಎಚ್‍ಡಿಕೆ, ಅದಕ್ಕಾಗಿ ಹಣ ಹೊಂದಿಸಲು ಸೆಸ್ ಹೆಚ್ಚಿಸಿದ್ದರು. ಬಜೆಟ್ ನಲ್ಲಿ ಕುಮಾರಸ್ವಾಮಿ ಪೆಟ್ರೋಲ್ ಮೇಲಿನ ಸುಂಕವನ್ನು ಶೇ.30 ರಿಂದ ಶೇ.32ಕ್ಕೆ ಹೆಚ್ಚಿಸಿದ್ದರೆ ಡೀಸೆಲ್ ಮೇಲಿನ ಸುಂಕವನ್ನು ಶೇ.19 ರಿಂದ ಶೇ.21ಕ್ಕೆ ಏರಿಸಿದ್ದರು. ಸೆಪ್ಟೆಂಬರ್ 17 ರಂದು ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ. ಸೆಸ್ ಇಳಿಕೆ ಮಾಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv