ಬೆಂಗಳೂರು: ಖ್ಯಾತ ಸಾಹಿತಿ, ಲೇಖಕ, ಸಂಶೋಧಕ ಡಾ. ಚಿದಾನಂದಮೂರ್ತಿ(88) ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಬಾಲ್ಯ ಮತ್ತು ಶಿಕ್ಷಣ:
ಚಿದಾನಂದಮೂರ್ತಿಗಳು 1931 ಮೇ 10ರಂದು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೆಕೋಗಲೂರಿನಲ್ಲಿ ಜನಿಸಿದರು. ನಂತರ ಮೂರ್ತಿಗಳ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾಭ್ಯಾಸ ಕೋಗಲೂರು, ಸಂತೆಬೆನ್ನೂರುಗಳಲ್ಲಿ ಮಾಡಿದರು. ಇಂಟರ್ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಅವರು 10ನೇ ಸ್ಥಾನಗಳಿಸಿದರು. ಆದರೆ ಮೆಡಿಕಲ್ ಎಂಜಿನಿಯರಿಂಗ್ ಸೇರದೆ ಕನ್ನಡ ಆನರ್ಸ್ ಸೇರಿದರು. ಅಂದಿನ ಪ್ರಸಿದ್ಧ ಅಧ್ಯಾಪಕರ ಮಾರ್ಗದರ್ಶನ ಮತ್ತು ಸುತ್ತೂರು ಸಂಸ್ಥಾನದ ಉಚಿತ ವಿದ್ಯಾರ್ಥಿನಿಲಯದ ಪೋಷಣೆಯಲ್ಲಿ ಪ್ರಥಮ ವರ್ಗ, ಪ್ರಥಮ ಶ್ರೇಣಿ ಅಲ್ಲದೆ ಆಲ್ ಆನರ್ಸ್ ಚಿನ್ನದ ಪದಕ ಕೂಡ ಪಡೆದರು. ಬಳಿಕ ಎರಡು ವರ್ಷಗಳ ಕಾಲ ಬೆಂಗಳೂರು, ತುಮಕೂರು, ಕೋಲಾರದ ಪದವಿ ಕಾಲೇಜುಗಳಲ್ಲಿ ಕನ್ನಡ ಅಧ್ಯಾಪಕರಾದರು. ಮತ್ತ ರಜೆ ಹಾಕಿ ಮೈಸೂರಿನಲ್ಲಿ ಕನ್ನಡ ಎಂ.ಎ ಪದವಿಯನ್ನು ಪ್ರಥಮ ಸ್ಥಾನದೊಂದಿಗೆ ಗಳಿಸಿದರು.
Advertisement
Advertisement
ಶಾಸನ ಕ್ಷೇತ್ರದೆಡೆಗೆ:
ಎಂ.ಎ ಓದುವಾಗಲೇ ಡಿ.ಎಲ್. ನರಸಿಂಹಾಚಾರ್ಯರ ಸೂಚನೆಯ ಮೇರೆಗೆ ಪಂಪನಿಗೆ ಹಿನ್ನೆಲೆಯಾಗಿದ್ದ ಸಾಮಾಜಿಕ ಬದುಕನ್ನು ಶಾಸನಗಳನ್ನು ಆಧರಿಸಿ ಪುನಃರಚಿಸುವ ಪ್ರಯತ್ನಕ್ಕೆ ಮೂರ್ತಿಗಳು ತೊಡಗಿದರು. ಅದರ ಫಲವಾಗಿ ಬಂದ ಲೇಖನ ‘ಪಂಪಕವಿ ಮತ್ತು ಮೌಲ್ಯಪ್ರಸಾರ’. ಆ ಮೂಲಕ ಶಾಸನ ಕ್ಷೇತ್ರದೆಡೆಗೆ ಹೊರಳಿದ ಮೂರ್ತಿಗಳು ‘ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ’ ಎಂಬ ನಿಬಂಧ ಸಿದ್ಧಪಡಿಸಿ ತೀ.ನಂ. ಶೀಕಂಠಯ್ಯನವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪದವಿ ಪಡೆದರು. ಈ ನಿಬಂಧ ಕನ್ನಡ ಸಂಶೋಧನ ಕ್ಷೇತ್ರದ ಮಹತ್ವಪೂರ್ಣ ಕೃತಿಯಾಗಿದೆ.
Advertisement
ಅಧ್ಯಾಪಕರಾಗಿ ಸೇವೆ:
ಆರಂಭದ ಕೆಲವು ವರ್ಷ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದ ಚಿದಾನಂದಮೂರ್ತಿಗಳು 1957ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜಿನಲ್ಲಿ ಅಧ್ಯಾಪಕರಾದರು. 1960ರ ಹೊತ್ತಿಗೆ ಮೈಸೂರಿನ ಮಾನಸಗಂಗೋತ್ರಿಯ ಸ್ನಾತಕೋತ್ತರ ಕನ್ನಡ ವಿಭಾಗದ ಅಧ್ಯಾಪಕರಾದರು. 1968ರವರೆಗೆ ಅಲ್ಲಿ ಅಧ್ಯಾಪಕರಾಗಿ, ಕನ್ನಡ ರೀಡರ್ ಆಗಿದ್ದು, ನಂತರ ಬೆಂಗಳೂರು ವಿಶ್ವವಿದ್ಯಾಲಯವನ್ನು ಸೇರಿದರು. ಅಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕೆಲಸಮಾಡಿ 1990ರ ಅಕ್ಟೋಬರ್ 10ರಂದು ಸ್ವಯಂಸೇವಾ ನಿವೃತ್ತಿ ಪಡೆದರು.
Advertisement
ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಇಟಲಿ, ಗ್ರೀಸ್, ಈಜಿಪ್ಟ್, ಥೈಲಾಂಡ್, ಜಪಾನ್, ಹವಾಯ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳನ್ನು ಅವರು ಸುತ್ತಿದ್ದಾರೆ. ಸಂಶೋಧನೆಗೆ ಕನ್ನಡದ ಕಾರಣಕ್ಕೆ ಕರ್ನಾಟಕದ ಬೇರೆ ಬೇರೆ ಪ್ರಾಂತ್ಯಗಳನ್ನು ಅವರು ವ್ಯಾಪಕವಾಗಿ ಸುತ್ತಿದ್ದಾರೆ. ಬಕ್ರ್ಲಿ, ಫಿಲಡೆಲ್ಫಿಯ, ಸ್ಟಾನ್ಫೊರ್ಡ್ ಮುಂತಾದ ಹಲವಾರು ವಿಶ್ವವಿದ್ಯಾಲಯಗಳು ಮತ್ತು ವಿಶ್ವಮಟ್ಟದ ಐತಿಹಾಸಿಕ ಭಾಷಾವಿಜ್ಞಾನ ಸಮ್ಮೇಳನಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಈ ಎಲ್ಲವೂ ಅವರ ನಿರಂತರ ಅಧ್ಯಯನ ಶೀಲತೆ ಮತ್ತು ವಿದ್ವತ್ತಿನ ಸೂಚಕಗಳಾಗಿವೆ.
ಕನ್ನಡ ಸಂಶೋಧನ ಕ್ಷೇತ್ರದಲ್ಲಿ ಚಿದಾನಂದಮೂರ್ತಿ ಅವರದು ಚಿರಸ್ಮರಣೀಯವಾದ ದೊಡ್ಡ ಹೆಸರು. ಯುಗಪ್ರವರ್ತನೆಯ ಸಂಶೋಧಕ, ಸಂಶೋಧನೆಯ ಸಂಶೋಧಕ, ಸಂಸ್ಕೃತಿ ಸಂಶೋಧಕ, ತೀ.ನಂ.ಶ್ರೀ ಉತ್ತರಾಧಿಕಾರಿ ಎಂಬೆಲ್ಲ ಹೊಗಳಿಕೆಗೆ ಮೂರ್ತಿಗಳು ಪಾತ್ರರಾಗಿದ್ದಾರೆ. ಸುಮಾರು ನಾಲ್ಕು ದಶಕಗಳವರೆಗೆ ಅವರು ಸಂಶೋಧನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಂಶೋಧನೆಗಳ ಕುರಿತಾದ ಮಹತ್ವದ ಬರಹಗಳನ್ನು ಪ್ರಕಟಿಸಿದ್ದಾರೆ.
ಚಿದಾನಂದಮೂರ್ತಿಗಳು 25ಕ್ಕೂ ಹೆಚ್ಚು ಪುಸ್ತಕಗಳನ್ನೂ, 400ಕ್ಕೂ ಹೆಚ್ಚು ಸಂಪ್ರಬಂಧಗಳನ್ನೂ ಪ್ರಕಟಿಸಿದ್ದಾರೆ. ಭಾಷೆ, ವ್ಯಾಕರಣ, ಸ್ಥಳನಾಮ, ಛಂದಸ್ಸು, ಗ್ರಂಥ ಸಂಪಾದನೆ, ಸಾಹಿತ್ಯ ಚರಿತ್ರೆ, ಜಾನಪದ, ಶಾಸನ, ಕರ್ನಾಟಕ ಇತಿಹಾಸ ಸಂಸ್ಕೃತಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸಂಶೋಧನೆ ಕೈಗೊಂಡಿದ್ದಾರೆ. 1960ರ ದಶಕಗಳಲ್ಲಿ ತಾವು ಪ್ರಕಟಿಸಿದ ಹಲವಾರು ಲೇಖನಗಳಲ್ಲೇ ಉಂಬರಿ, ಇರ್, ಡುಂಡುಚಿ, ಅಮ್ಮ, ಅಬ್ಬೆ, ಅಲ್ಲಮ, ಬಾಮಬ್ಬೆ, ಶಬ್ದಗಳನ್ನು ಕನ್ನಡ ಭಾಷೆ, ವ್ಯಾಕರಣ, ಅವಸ್ಥಾಂತರಗಳ ಹಿನ್ನೆಲೆಯಲ್ಲಿ ಮೂರ್ತಿಗಳು ಪರಿಶೀಲಿಸಿದ್ದಾರೆ. ಅನಂತರ ‘ಭಾಷಾ ವಿಜ್ಞಾನದ ಮೂಲತತ್ವಗಳು’ (1965), ‘ವಾಗಾರ್ಥ'(1981) ಎಂಬ ಎರಡು ಮುಖ್ಯವಾದ ಅವರ ಭಾಷಾಸಂಬಂಧವಾದ ಕೃತಿಗಳು ಪ್ರಕಟವಾದವು.
ಸಾಧನೆ:
ಕನ್ನಡದ ಬಗೆಗಿನ ಚಿದಾನಂದಮೂರ್ತಿಗಳ ಚರಿತ್ರಾರ್ಹ ಸಾಧನೆ ಎಂದರೆ ಹಂಪಿಯಲ್ಲಿ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆ. 1985ರಲ್ಲಿ ಕಾಲ್ನಡಿಗೆಯ ಮೂಲಕ ಬೆಂಗಳೂರಿನಿಂದ ಹಂಪಿಗೆ ಪ್ರಯಾಣ ಮಾಡುವಾಗ ಮೂರ್ತಿಗಳಿಗೆ ಕನ್ನಡಕ್ಕೆ ಏಕೆ ಒಂದು ಪ್ರತ್ಯೇಕ ವಿಶ್ವವಿದ್ಯಾನಿಲಯ ಅಸ್ತಿತ್ವಕ್ಕೆ ಬರಬಾರದು ಎನಿಸಿತು. ಸಾಹಿತಿಗಳ, ಕಲಾವಿದರ ಬಳಗದ ಮೂಲಕ ಆಗಿನ ಮುಖ್ಯಮಂತ್ರಿ, ಸಚಿವಸಂಪುಟ, ಶಾಸಕರ ಮೇಲೆ ಒತ್ತಾಯ ತಂದು ಅದರ ಸ್ಥಾಪನೆಗೆ ಓಡಾಡಿ ಮುಂದಿನ ಒಂದೆರಡು ವರ್ಷಗಳಲ್ಲಿ ಅದರ ಕಾರ್ಯಾರಂಭಕ್ಕೆ ಕಾರಣರಾದರು. ಕರ್ನಾಟಕದ ಬಾಷೆ, ಸಾಹಿತ್ಯ, ಇತಿಹಾಸ, ಭೂಶೋಧ, ಲಲಿತಕಲೆ, ಸಮಾಜಶಾಸ್ತ್ರ, ಜಾನಪದ, ಅರ್ಥಶಾಸ್ತ್ರ, ವಿಜ್ಞಾನ, ಸಮೂಹ ಮಾಧ್ಯಮ ಮುಂತಾದವುಗಳ ಅಧ್ಯಯನ ನಡೆಯಲು ಪೂರ್ಣಪ್ರಮಾಣದ ಉನ್ನತ ವಿಶ್ವವಿದ್ಯಾನಿಲಯವನ್ನು ಅಸ್ತಿತ್ವಕ್ಕೆ ತಂದು ಕನ್ನಡದ ಕೆಲಸಗಳಿಗೆ ಹೊಸ ಚಾಲನೆ ಕೊಟ್ಟರು.
ಪ್ರಶಸ್ತಿ:
ಚಿದಾನಂದಮೂರ್ತಿಗಳಿಗೆ ಅನೇಕ ಗೌರವಗಳು, ಅವರ ಕೃತಿಗಳಿಗೆ ಸಾಹಿತ್ಯ ಆಕಾಡೆಮಿ ಪುರಸ್ಕಾರಗಳು, ಗೌರವಗಳು ದೊರೆತಿವೆ. ಅಲ್ಲದೇ ಅವರ ಹೆಸರಿನಲ್ಲಿ ‘ಚಿದಾನಂದ ಪ್ರಶಸ್ತಿ’ ಎಂಬುದನ್ನು ಸ್ಥಾಪಿಸಿ ಚಿದಾನಂದಮೂರ್ತಿಯವರ ಜನ್ಮದಿನವಾದ ಮೇ 10ರಂದು ಪ್ರತೀವರ್ಷ ಕನ್ನಡ ಸಂಶೋಧನ ಕ್ಷೇತ್ರದಲ್ಲಿ ಕೆಲಸ ಮಾಡಿದ ವಿದ್ವಾಂಸರಿಗೆ ಅದನ್ನು ನೀಡುತ್ತ ಬಂದಿದ್ದಾರೆ.