ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆಯಾಗಿದೆ. ಕಳೆದ ಒಂದು ದಶಕದಲ್ಲಿ 152 ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಾಂಬ್ ಸಿಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಡೆದಿರುವ 152 ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ವಂಚನೆಯಾಗಿದೆ. ಆದ್ರೆ ಈವರೆಗೆ ಯಾರೊಬ್ಬರಿಗೂ ಯಾವುದೇ ಶಿಕ್ಷೆ ಆಗಿಲ್ಲ ಎಂದು ಆರೋಪಿಸಿದ್ದಾರೆ.
LIVE: Press Conference | Indira Bhawan, New Delhi https://t.co/hpUymlX6Rf
— Rahul Gandhi (@RahulGandhi) July 22, 2026
ಇದೇ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದಿರುವ ಪೊಲೀಸ್ ಕ್ರಮವನ್ನು ಖಂಡಿಸಿದರು. ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಮ್ಮ ವಿದ್ಯಾರ್ಥಿಗಳು ಏನು ತಪ್ಪು ಮಾಡಿದ್ದಾರೆ? ಭದ್ರತಾ ಸಿಬ್ಬಂದಿ ಅವರತ್ತ ಏಕೆ ಶಸ್ತ್ರಾಸ್ತ್ರ ಬೀಸಿದ್ದಾರೆ? ಅವರು ನ್ಯಾಯಯುತ ಹಾಗೂ ಪಾರದರ್ಶಕ ಶಿಕ್ಷಣ ವ್ಯವಸ್ಥೆಯನ್ನ ಮಾತ್ರ ಕೇಳುತ್ತಿದ್ದಾರೆ. ಅದು ಈ ದೇಶವು ಅವರಿಗೆ ನೀಡಬೇಕಾದ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವಿದ್ಯಾರ್ಥಿಗಳು ತಿಂಗಳುಗಟ್ಟಲೆ, ವರ್ಷಗಟ್ಟಲೆ ಕಠಿಣ ಪರಿಶ್ರಮ ಪಡುತ್ತಾರೆ. ಆದ್ರೆ ಪರೀಕ್ಷೆಯ ಕೊನೇ ಕ್ಷಣದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿ ಕೇಳಬೇಕಾಗುತ್ತದೆ. ಇಂತಹ ನಿರಂತರ ಅಕ್ರಮಗಳಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೂ ಶರಣಾಗಿದ್ದಾರೆ. ಆದಾಗ್ಯೂ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಉಂಟಾಗಿರುವ ಈ ಗಂಭೀರ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
भारत के छात्रों और प्रधानमंत्री को मेरा सीधा संदेश… pic.twitter.com/pgZZHLLz8h
— Rahul Gandhi (@RahulGandhi) July 21, 2026
ರಾಹುಲ್ ಗಾಂಧಿ ಅವರ 3 ಪ್ರಮುಖ ಬೇಡಿಕೆಗಳೇನು?
ಇದೇ ವೇಳೆ ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು.
* ನಿರಂತರವಾಗಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
* ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನ ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
* ದೇಶಾದ್ಯಂತ ನಡೆದ ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ಅನುಭವಿಸಿದ ಸಂಕಷ್ಟಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
