ನವದೆಹಲಿ: ಒಬ್ಬ ಅಭ್ಯರ್ಥಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುವ ಪ್ರಸ್ತಾಪಕ್ಕೆ ಕೇಂದ್ರ ಚುನಾವಣಾ ಆಯೋಗ ಬೆಂಬಲ ನೀಡಿ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿದೆ.
ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಆಭ್ಯರ್ಥಿಗಳು ಒಂದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಬಿಜೆಪಿ ಮುಖಂಡ ಅಶ್ವನಿ ಕುಮಾರ್ ಉಪಾಧ್ಯಾಯ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಸುಪ್ರೀಂ 2017ರ ಡಿಸೆಂಬರ್ ನಲ್ಲಿ ನಿಮ್ಮ ಅಭಿಪ್ರಾಯವನ್ನು ತಿಳಿಸಿ ಎಂದು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.
Advertisement
ಈ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ್ದು, ನಿಯಮ ರೂಪಿಸಲು 1951 ರ ಜನಪ್ರತಿನಿಧಿಗಳ ಕಾಯ್ದೆಗೆ ತಿದ್ದುಪಡಿ ತರಬೇಕು. ಒಬ್ಬ ಅಭ್ಯರ್ಥಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಪದ್ಧತಿಯಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಈ ಕುರಿತು 2004 ಮತ್ತು 2016 ರಲ್ಲಿ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ತನ್ನ ಅಭಿಪ್ರಾಯವನ್ನು ತಿಳಿಸಲಾಗಿದೆ ಎಂದು ಉಲ್ಲೇಖಿಸಿದೆ.
Advertisement
ಒಂದು ಕ್ಷೇತ್ರವನ್ನು ಉಳಿಸಿಕೊಂಡು ಇನ್ನೊಂದು ಕ್ಷೇತ್ರವನ್ನು ಬಿಡುವುದು ಮತದಾರರಿಗೆ ಮಾಡುವ ಅನ್ಯಾಯವಾಗಿದೆ. ಅಭ್ಯರ್ಥಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಬಾರದು ಎನ್ನುವುದು ಆಯೋಗದ ನಿಲುವಾಗಿದೆ ಎಂದು ಅಫಿಡವಿಟ್‍ನಲ್ಲಿ ಆಯೋಗ ತನ್ನ ಅಭಿಪ್ರಾಯವನ್ನು ತಿಳಿಸಿದೆ.
Advertisement
ಚುನಾವಣಾ ಸುಧಾರಣೆಗೆ ಸಂಬಂಧಪಟ್ಟಂತೆ 255 ನೇ ವರದಿಯಲ್ಲೂ ಕೂಡ ಇದೇ ಅಭಿಪ್ರಾಯವನ್ನು ಕಾನೂನು ಆಯೋಗ ವ್ಯಕ್ತಪಡಿಸಿತ್ತು. ಎರಡು ಕ್ಷೇತ್ರಗಳಿಂದ ಒಬ್ಬ ಅಭ್ಯರ್ಥಿ ಸ್ಪರ್ಧೆ ಮಾಡುವುದು ಸರಿಯಲ್ಲ. ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಗಳೇ ಉಪಚುನಾವಣೆ ವೆಚ್ಚವನ್ನು ಭರಿಸುವಂತೆ ತನ್ನ ವರದಿಯಲ್ಲಿ ಆಯೋಗ ಸಲಹೆ ನೀಡಿತ್ತು.
Advertisement
ಒಬ್ಬ ಅಭ್ಯರ್ಥಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಪದ್ಧತಿಯಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಮುಖ್ಯ ಚುನಾವಣೆ ನಡೆದ 6 ತಿಂಗಳ ಒಳಗಡೆ ಉಪಚುನಾವಣೆ ನಡೆಸಬೇಕಾಗಿದೆ. 1951ರ ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 33(7) ರಲ್ಲಿ ಅಭ್ಯರ್ಥಿಗಳು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಪದ್ಧತಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಈ ಕಾಯ್ದೆಯನ್ನು ತಿದ್ದುಪಡಿ ಮಾಡುವಂತೆ ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಉಪಾಧ್ಯಾಯ ಪಿಐಎಲ್ ನಲ್ಲಿ ಮನವಿ ಮಾಡಿದ್ದರು.
ದೇಶಾದ್ಯಂತ ರಾಜಕೀಯ ಪಕ್ಷದ ಹಿರಿಯ ನಾಯಕರುಗಳು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತಿರುತ್ತಾರೆ. ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದಲ್ಲಿ ಒಂದು ಕ್ಷೇತ್ರವನ್ನು ಉಳಿಸಿಕೊಂಡು ಇನ್ನೊಂದನ್ನು ಬಿಡಬೇಕಾಗುತ್ತದೆ. ಮುಖ್ಯ ಚುನಾವಣೆ ನಂತರ ಕಡಿಮೆ ಕಾಲಾವಧಿಯಲ್ಲಿ ಉಪಚುನಾವಣೆಗಳು ನಡೆಯುತ್ತಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.