ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂಬುದು ಒಮ್ಮತದ ತೀರ್ಮಾನವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸರ್ವಪಕ್ಷಗಳ ನಾಯಕರ ಸಭೆಯ ನಂತರ ಮಾಧ್ಯಮದವರೊಂದಿಗೆ ಬೊಮ್ಮಾಯಿ ಅವರು ಮಾತನಾಡಿದರು. ಈ ವೇಳೆ ಅವರು, ಎಲ್ಲ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ 50% ನ್ನು ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ `ರೋಬೋ’
ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಟ್ರಾನ್ಸ್ ಫಾರ್ಮರ್ ಸ್ಫೋಟ ತಂದೆ ಸಾವು – ಮಗಳ ಸ್ಥಿತಿ ಗಂಭೀರ
ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.