ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ದೇಶ ನೀಡಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ ವೇಳೆ ಮಹಿಳೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯ ಎಂದಿದ್ದಾರೆ.

ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಚಾರಣಿಗರ/ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರಮಾಣಿತ ಕಾರ್ಯಾಚರಣೆ ವಿಧಾನ ರೂಪಿಸಲಾಗಿದ್ದು, ಈ ಎಸ್‌ಒಪಿ ಜಾರಿ ಖಚಿತಪಡಿಸಿಕೊಳ್ಳುವವರೆಗೆ ಚಾರಣಪಥಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ಪ್ರಕಾರವಾಗಿ ಸಾಕಾನೆ ಶಿಬಿರಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಎಸ್‌ಒಪಿ ರೂಪಿಸಲು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ದುಬಾರೆಯಲ್ಲಿ ದುರಂತ – ಮಾರ್ತಾಂಡನ ಜೊತೆ ಕಂಜನ್ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ

