ಬೆಂಗಳೂರು: ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಶುಕ್ರವಾರ ಎಸ್‌ಸಿಸಿಪಿ/ಟಿಎಸ್‌ಪಿ ರಾಜ್ಯ ಅಭಿವೃದ್ದಿ ಪರಿಷತ್ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ (Morarji Desai School Chamarajpet) ಅನಿರೀಕ್ಷಿತ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಹೈದರಾಬಾದ್ ಕರ್ನಾಟಕದಲ್ಲಿ ಬಿಜೆಪಿ ಹಿನ್ನಡೆಗೆ ಪಂಚ ಗ್ಯಾರಂಟಿ ಕಾರಣ – ಆತ್ಮಾವಲೋಕನ ಸಭೆಯಲ್ಲಿ ಅಭಿಪ್ರಾಯ
ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.
ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜೊತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ