– 2027ರ ಏಪ್ರಿಲ್ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ; ಹೆಚ್ಚಿನ ಬಂಡವಾಳ ಹೂಡಿಕೆ ನಿರೀಕ್ಷೆ
ಬೆಂಗಳೂರು: ರಾಜ್ಯದ ಕೈಗಾರಿಕಾ ಅಭಿವೃದ್ಧಿಯನ್ನು ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸದೆ, ಎರಡನೇ ಮತ್ತು ಮೂರನೇ ಹಂತದ ನಗರಗಳಿಗೂ ವಿಸ್ತರಿಸುವ ಉದ್ದೇಶದಿಂದ ನಮ್ಮ ಸರ್ಕಾರ `ಬಿಯಾಂಡ್ ಬೆಂಗಳೂರು’ (Beyond Bengaluru) ನೀತಿಯನ್ನು ರೂಪಿಸಿದೆ. ಈ ಮೂಲಕ ರಾಜ್ಯದ ವಿವಿಧ ನಗರಗಳಿಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ, ಸ್ಥಳೀಯ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಹಾಗೂ ಸ್ಥಳೀಯ ಉದ್ಯಮಿಗಳಿಗೆ ಉತ್ತೇಜನ ನೀಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ `ಇನ್ವೆಸ್ಟ್ ಕರ್ನಾಟಕ – ಜಾಗತಿಕ ಹೂಡಿಕೆದಾರರ ಸಮಾವೇಶ 2027’ರ ಪೂರ್ವಭಾವಿ ಸಮಾರಂಭವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ರಾಜ್ಯದ ಎರಡನೇ ಮತ್ತು ಮೂರನೇ ಹಂತದ ನಗರಗಳಿಗೂ ಕೈಗಾರಿಕೆಗಳು ಮತ್ತು ಬಂಡವಾಳ ಹೂಡಿಕೆಗಳು ತಲುಪಬೇಕು. ಆಯಾ ಪ್ರದೇಶಗಳಲ್ಲಿಯೇ ಯುವಜನರಿಗೆ ಉದ್ಯೋಗಾವಕಾಶಗಳು ದೊರೆಯಬೇಕು. ಯುವಕರು ಸ್ವಂತ ಉದ್ಯಮಗಳನ್ನು ಆರಂಭಿಸಲು ಪ್ರೋತ್ಸಾಹ ಸಿಗಬೇಕು. ಈಗಾಗಲೇ ಸ್ಥಳೀಯ ಮಟ್ಟದಲ್ಲಿ ಉದ್ಯಮಗಳನ್ನು ನಡೆಸುತ್ತಿರುವ ಉದ್ಯಮಿಗಳಿಗೂ ಉತ್ತೇಜನ ನೀಡಬೇಕು ಎಂಬ ಪರಿಕಲ್ಪನೆಯೊಂದಿಗೆ ‘ಬಿಯಾಂಡ್ ಬೆಂಗಳೂರು’ ನೀತಿಯನ್ನು ರೂಪಿಸಲಾಗಿದೆ ಎಂದು ಹೇಳಿದರು.
2027ರ ಏಪ್ರಿಲ್ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ:
2027ರ ಏಪ್ರಿಲ್ ತಿಂಗಳಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಈ ಸಮಾವೇಶದಲ್ಲಿ ವಿಶ್ವದ ವಿವಿಧ ದೇಶಗಳಿಂದ ದೊಡ್ಡ ದೊಡ್ಡ ಕಂಪನಿಗಳು ಹಾಗೂ ಪ್ರಮುಖ ಹೂಡಿಕೆದಾರರು ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಈ ಬಾರಿಯ ಸಮಾವೇಶದ ಮೂಲಕ ರಾಜ್ಯಕ್ಕೆ ಇನ್ನಷ್ಟು ಹೆಚ್ಚಿನ ಬಂಡವಾಳ ಹೂಡಿಕೆ ಹರಿದುಬರುವ ವಿಶ್ವಾಸವಿದೆ ಎಂದು ತಿಳಿಸಿದರು.
ಕಳೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಹೂಡಿಕೆಗೆ ಸಂಬAಧಿಸಿದ ಒಪ್ಪಂದಗಳು ನಡೆದಿದ್ದವು. ಅವುಗಳಲ್ಲಿ ಶೇ.70ಕ್ಕೂ ಹೆಚ್ಚಿನ ಹೂಡಿಕೆ ಕಾರ್ಯರೂಪಕ್ಕೆ ಬಂದಿದೆ. ಅದೇ ರೀತಿಯಲ್ಲಿ ಮುಂಬರುವ ಸಮಾವೇಶದಲ್ಲಿಯೂ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ, ಅವುಗಳನ್ನು ಅನುಷ್ಠಾನಕ್ಕೆ ತರುವ ವಿಶ್ವಾಸವಿದೆ ಎಂದು ಹೇಳಿದರು.
ಮೆಟ್ರೋ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರ ಅಗತ್ಯ:
ಬೆಂಗಳೂರು ಮೆಟ್ರೋದ ಪಿಂಕ್ ಲೈನ್ ಯೋಜನೆಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಅವರು ಮಾಡಿರುವ ಆರೋಪಗಳ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಇಂತಹ ದೊಡ್ಡ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಾಧ್ಯ ಎಂದರು.
ನಾವು ಕೇಂದ್ರ ಸರ್ಕಾರವನ್ನು ದೂಷಿಸುವುದು, ಅವರು ರಾಜ್ಯ ಸರ್ಕಾರವನ್ನು ದೂಷಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಕೆಲವು ಯೋಜನೆಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತದೆ. ಇನ್ನು ಕೆಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತದೆ. ಇದು ಅನುದಾನ ಹಂಚಿಕೆಯ ವ್ಯವಸ್ಥೆಯಾಗಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ಸಹಭಾಗಿತ್ವ ಸಹಜ ಎಂದು ವಿವರಿಸಿದರು.
ನಮ್ಮ ಉದ್ದೇಶ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಇನ್ನೂ ಹೆಚ್ಚಿನ ಅನುದಾನ ದೊರೆಯಬೇಕು ಎಂಬುದಾಗಿದೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಸಹಕಾರವೂ ಅಗತ್ಯವಾಗಿದೆ ಎಂದು ಹೇಳಿದರು.
ಮೆಟ್ರೋ ಯೋಜನೆಯ ಉದ್ಘಾಟನೆಗೆ ಪ್ರಧಾನಮಂತ್ರಿಗಳೇ ಆಗಮಿಸುತ್ತಿದ್ದಾರೆ. ಪ್ರಧಾನಮಂತ್ರಿಗಳು ಯಾವುದೇ ಕಾರ್ಯಕ್ರಮಕ್ಕೆ ಆಗಮಿಸುವ ಮೊದಲು ಸಂಬಂಧಪಟ್ಟ ಎಲ್ಲ ಮಾಹಿತಿಗಳನ್ನು ಪರಿಶೀಲಿಸಿಕೊಂಡೇ ಬರುತ್ತಾರೆ. ಪ್ರಧಾನಮಂತ್ರಿಗಳ ಕಚೇರಿಯಿಂದಲೂ ಅಗತ್ಯ ಮಾಹಿತಿ ಮತ್ತು ವಿವರಗಳನ್ನು ಪಡೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಪ್ರಧಾನಮಂತ್ರಿಗಳೇ ಕಾರ್ಯಕ್ರಮಕ್ಕೆ ಬರುತ್ತಿರುವಾಗ ರಾಜ್ಯ ಸರ್ಕಾರ ಸುಳ್ಳು ಮಾಹಿತಿಯನ್ನು ನೀಡಲು ಸಾಧ್ಯವೇ? ಪ್ರಧಾನಮಂತ್ರಿಗಳು ಎಲ್ಲ ಮಾಹಿತಿಗಳನ್ನು ಪರಿಶೀಲಿಸಿಕೊಂಡೇ ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ. ಹೀಗಿರುವಾಗ ರಾಜ್ಯ ಸರ್ಕಾರ ತಪ್ಪು ಮಾಹಿತಿಯನ್ನು ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.


