ರಾಯ್ಪುರ: ಅಬಕಾರಿ ಇಲಾಖೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆ ಛತ್ತೀಸ್‌ಗಢದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಮತ್ತು ಅವರ ಪುತ್ರನ ಮನೆ ಮೇಲೆ ಇ.ಡಿ ದಾಳಿ ನಡೆಸಿದೆ.
ದುರ್ಗ್ ಜಿಲ್ಲೆಯ ಭಿಲಾಯಿ ನಗರದಲ್ಲಿರುವ ಮನೆ ಹಾಗೂ ಅವರಿಗೆ ಸಂಬಂಧಿಸಿದ 14 ಸ್ಥಳಗಳಲ್ಲಿ ED ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಹಲವಾರು ನಿರ್ಣಾಯಕ ದಾಖಲೆಗಳನ್ನು ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಗರಣದಲ್ಲಿ ಭೂಪೇಶ್ ಅವರ ಪುತ್ರ ಚೈತನ್ಯ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ದಾಳಿ ನಡೆದಿದೆ. ಏಳು ವರ್ಷಗಳಿಂದ ನಡೆಯುತ್ತಿದ್ದ ಸುಳ್ಳು ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದ ನಂತರ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ಭಿಲಾಯಿ ನಿವಾಸಕ್ಕೆ ಪ್ರವೇಶಿಸಿದರು. ಈ ಪಿತೂರಿಯ ಮೂಲಕ ಯಾರಾದರೂ ಪಂಜಾಬ್‌ನಲ್ಲಿ ಕಾಂಗ್ರೆಸ್ ಅನ್ನು ತಡೆಯಲು ಪ್ರಯತ್ನಿಸುತ್ತಿದ್ದರೆ, ಅದು ತಪ್ಪು ತಿಳುವಳಿಕೆಯಾಗಿದೆ ಎಂದು ಬಘೇಲ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಕಿಡಿಕಾರಿದ್ದಾರೆ.
ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ದಾಳಿ ನಡೆಸಲಾದ ಸ್ಥಳಗಳಲ್ಲಿ ಚೈತನ್ಯ ಬಘೇಲ್ ಅವರ ಆಪ್ತರಿಗೆ ಸಂಬಂಧಿಸಿದ ಮನೆ, ಕಚೇರಿಗಳು ಸೇರಿವೆ.
ಮದ್ಯ ಹಗರಣಕ್ಕೆ ಸಂಬಂಧಿಸಿದ ತನಿಖೆ ಇದಾಗಿದೆ. ಇದು ರಾಜ್ಯ ಖಜಾನೆಗೆ ಭಾರಿ ನಷ್ಟ ಉಂಟುಮಾಡಿದೆ ಎಂದು ಕೇಂದ್ರ ಸಂಸ್ಥೆ ಆರೋಪಿಸಿದೆ. ಮದ್ಯದ ಸಿಂಡಿಕೇಟ್‌ನಲ್ಲಿ ಭಾಗಿಯಾಗಿರುವವರು ವಿವಿಧ ಯೋಜನೆಗಳ ಮೂಲಕ ಸುಮಾರು 2,161 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ತಿಳಿಸಿದೆ.