ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಮುಖಂಡ ಹಾಗೂ ನಟ ಮುಖ್ಯಮಂತ್ರಿ ಚಂದ್ರು ಇದೀಗ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.
ಆಮ್ ಆದ್ಮಿ ಪಾರ್ಟಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.
ನಾಡಿನ ಸಜ್ಜನ ಗಣ್ಯರ ಆಮ್ ಆದ್ಮಿ ಪಾರ್ಟಿ ಸೇರ್ಪಡೆ ಪರ್ವ ಮುಂದುವರಿದಿದೆ. ಈಗ ಖ್ಯಾತ ನಟ ಹಾಗೂ ವಿಧಾನಸಭೆ, ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆಯಾಗುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ
ಕಾಂಗ್ರೆಸ್ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಅವರಿಗೆ ರಾಜ್ಯಸಭೆ ಟಿಕೆಟ್ ಸಿಗಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಒಂದು ವಾರದ ಹಿಂದೆಯಷ್ಟೇ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್
ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷವಾಗಿ ಅಸಮಾಧಾನ ತೋರಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದರು.